ವಿಜಯಸಾಕ್ಷಿ ಸುದ್ದಿ, ಗದಗ: ಕಾಂಗ್ರೆಸ್ ಜಿಲ್ಲಾ ಘಟಕಗಳ ಅಧ್ಯಕ್ಷರ ಆಯ್ಕೆಯಲ್ಲಿ ಶೇ.50ರಷ್ಟು ಯುವಜನರಿಗೆ ಆದ್ಯತೆ ನೀಡಲು ಪಕ್ಷದ ವರಿಷ್ಠರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ವೀಕ್ಷಕ ವಿವೇಕ್ ಬನ್ಸಾಲ್ ಹೇಳಿದರು.
ಮಂಗಳವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆರು ಮಂದಿಯ ಹೆಸರುಗಳನ್ನು ಪ್ರಸ್ತಾಪಿಸಲಾಗಿದ್ದು, ಈ ಕುರಿತು ಪಕ್ಷದ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಕಾರ್ಯಕರ್ತರ ಅಭಿಪ್ರಾಯವನ್ನು ಪಕ್ಷದ ವರಿಷ್ಠರಿಗೆ ಸಲ್ಲಿಸಲಾಗುವುದು. ಅಂತಿಮವಾಗಿ ವರಿಷ್ಠರು ಅಧ್ಯಕ್ಷರನ್ನು ಆಯ್ಕೆ ಮಾಡಲಿದ್ದಾರೆ ಎಂದರು.
ಜಿಲ್ಲಾ ಘಟಕದ ಅಧ್ಯಕ್ಷರಾಗಲು ಕನಿಷ್ಠ ಐದು ವರ್ಷ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿರಬೇಕು ಎಂಬ ನಿಯಮವಿದೆ. ಇದರೊಂದಿಗೆ ಯುವಜನರು, ಮಹಿಳೆಯರು ಹಾಗೂ ದಲಿತರಿಗೆ ಪ್ರಾತಿನಿಧ್ಯ ಕಲ್ಪಿಸುವುದಕ್ಕೂ ಆದ್ಯತೆ ನೀಡಲಾಗುವುದು. ಪಕ್ಷದ ಸಂಘಟನೆ ಮತ್ತು ಸಶಕ್ತೀಕರಣಕ್ಕಾಗಿ ‘ಸಂಘಟನಾ ಸೃಜನಾ ಅಭಿಯಾನ’ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಯುವಜನರ ಧ್ವನಿಯಾಗಿದ್ದಾರೆ ರಾಹುಲ್ ಗಾಂಧಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಯುವಜನರು ನಡೆಸಿದ ಹೋರಾಟಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲಿನಿಂದಲೂ ಧ್ವನಿಯಾಗಿದ್ದರು. ದೇಶದ ಯುವಜನರ ಸಮಸ್ಯೆಗಳನ್ನು ಅವರು ನಿರಂತರವಾಗಿ ಪ್ರಸ್ತಾಪಿಸುತ್ತಿದ್ದಾರೆ. ಭಾರತ ಜಗತ್ತಿನಲ್ಲೇ ಅತಿ ಹೆಚ್ಚು ಯುವಶಕ್ತಿ ಹೊಂದಿರುವ ದೇಶವಾಗಿದ್ದು, ಈ ಯುವಶಕ್ತಿಯ ಧ್ವನಿಯಾಗಿ ರಾಹುಲ್ ಗಾಂಧಿ ಕೆಲಸ ಮಾಡುತ್ತಿದ್ದಾರೆ ಎಂದು ಬನ್ಸಾಲ್ ಹೇಳಿದರು.
ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಕುರಿತು ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಇದರಿಂದ ಯುವಜನತೆ ಸಂಕಷ್ಟಕ್ಕೆ ಸಿಲುಕಿದೆ. ದೇಶದ ವಿದೇಶಾಂಗ ಹಾಗೂ ಆರ್ಥಿಕ ಪರಿಸ್ಥಿತಿಯೂ ಚಿಂತಾಜನಕವಾಗಿದೆ. ದೇಶವನ್ನು ಸಮರ್ಪಕವಾಗಿ ಮುನ್ನಡೆಸಲು ವಿಫಲವಾಗಿರುವ ಕೇಂದ್ರ ಸರ್ಕಾರ ಕಾಂಗ್ರೆಸ್ ವಿರುದ್ಧ ಷಡ್ಯಂತ್ರ ರೂಪಿಸುತ್ತಿದೆ ಎಂದು ಅವರು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕರಾದ ಮಲ್ಲಿಕಾರ್ಜುನ ಅಕ್ಕಿ, ಡಿ.ಆರ್. ಪಾಟೀಲ, ಬಿ.ಆರ್. ಯಾವಗಲ್ಲ, ಕೆಪಿಸಿಸಿ ಕಾರ್ಯದರ್ಶಿ ಸತೀಶ ಮೆಹರವಾಡೆ, ಮುಖಂಡರಾದ ರಾಬರ್ಟ್ ದದ್ದಾಪುರಿ, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೃಷ್ಣಗೌಡ ಪಾಟೀಲ, ಮುಖಂಡರಾದ ವಾಸಣ್ಣ ಕುರುಡಗಿ, ಸುಜಾತ ದೊಡ್ಡಮನಿ, ಮಿಥುನ್ ಪಾಟೀಲ, ಸಿದ್ದು ಪಾಟೀಲ, ಅಶೋಕ ಮಂದಾಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.



