ವಿಜಯಸಾಕ್ಷಿ ಸುದ್ದಿ, ಗದಗ: ಮುಳಗುಂದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಅಳವಡಿಸಿಲ್ಲ ಎಂದು ಆರೋಪಿಸಿ, ಜೈ ಭೀಮ ರಾಜ್ಯ ಸಂಘರ್ಷ ಸಮಿತಿಯ ಗದಗ ಜಿಲ್ಲಾ ಘಟಕವು ಆಕ್ಷೇಪ ವ್ಯಕ್ತಪಡಿಸಿದೆ.
ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಕ್ರಮ ಕೈಗೊಳ್ಳುವಂತೆ ಗದಗ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.
ಸಮಿತಿಯ ಜಿಲ್ಲಾಧ್ಯಕ್ಷ ಗಣೇಶ ವೈ. ಹುಬ್ಬಳ್ಳಿ ಮಾತನಾಡಿ, ಕಾಲೇಜಿನಲ್ಲಿ ಗಾಂಧೀಜಿ ಹಾಗೂ ಡಾ. ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಅಳವಡಿಸದಿರುವುದು ಖಂಡನೀಯ. ಈ ಕುರಿತು ಸ್ಥಳೀಯ ದಲಿತ ಯುವ ಮುಖಂಡರು ಎರಡು ತಿಂಗಳ ಹಿಂದೆಯೇ ಕಾಲೇಜಿನ ಪ್ರಭಾರಿ ಪ್ರಾಚಾರ್ಯೆ ಮಂಜುಳಾದೇವಿ ಹಕ್ಕಂಡಿ ಅವರ ಗಮನಕ್ಕೆ ತಂದಿದ್ದರೂ, ಇದುವರೆಗೆ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಸರ್ಕಾರದ ಆದೇಶದಂತೆ ಸರ್ಕಾರಿ ಶಾಲೆ, ಕಾಲೇಜು ಹಾಗೂ ಕಚೇರಿಗಳಲ್ಲಿ ಮಹನೀಯರ ಭಾವಚಿತ್ರಗಳನ್ನು ಅಳವಡಿಸುವುದು ಅಗತ್ಯವಾಗಿದ್ದರೂ, ಕಾಲೇಜಿನ ಆಡಳಿತದ ನಿರ್ಲಕ್ಷ್ಯದಿಂದ ಈ ಪರಿಸ್ಥಿತಿ ಉಂಟಾಗಿದೆ ಎಂದು ದೂರಿದರು. ಕೂಡಲೇ ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದರೆ ಪ್ರಾಚಾರ್ಯರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.
ಈ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೂ ಮನವಿ ಸಲ್ಲಿಸಲಾಯಿತು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ದಲಿತ ಮುಖಂಡ ಶರೀಫ ಬಿಳೆಯಲಿ, ಡಿಎಸ್‌ಎಸ್ ಮುಖಂಡ ಬಾಲರಾಜ ಅರಬರ, ಛಲವಾದಿ ಮಹಾಸಭಾ ಅಧ್ಯಕ್ಷ ಆನಂದ ಸಿಂಗಾಡಿ, ಕರ್ನಾಟಕ ಮಾದಿಗ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ರಾಘವೇಂದ್ರ ಪಿ. ಪರಾಪೂರ, ಪ್ರಜಾಶಕ್ತಿ ವೇದಿಕೆ ಅಧ್ಯಕ್ಷ ಮಂಜುನಾಥ ಎಫ್. ತೌಜಲ್, ರೋಣ ತಾಲೂಕು ಅಧ್ಯಕ್ಷ ಬಸವರಾಜ ಬದಾಮಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.



