ವಿಜಯಸಾಕ್ಷಿ ಸುದ್ದಿ, ಗದಗ: ಜಂತುಹುಳು ಸೋಂಕಿನಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ, ರಕ್ತಹೀನತೆ ಹಾಗೂ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತವಾಗುವ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ೧ರಿಂದ ೧೯ ವರ್ಷದೊಳಗಿನ ಎಲ್ಲ ಮಕ್ಕಳು ಜಂತುಹುಳು ನಿವಾರಣಾ ಮಾತ್ರೆ ಸೇವಿಸುವ ಮೂಲಕ ಸೋಂಕಿನಿಂದ ಮುಕ್ತರಾಗಬೇಕು ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಕೆ.ಎಸ್. ಮೀನಾಕ್ಷಿ ಹೇಳಿದರು.
ಬೆಟಗೇರಿಯ ಸೇಂಟ್ ಜಾನ್ಸ್ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರ್‌ಸಿಎಚ್ ಕಚೇರಿ, ಗದಗ ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸೇಂಟ್ ಜಾನ್ಸ್ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಜಂತುಹುಳುಗಳು ಮಕ್ಕಳ ದೇಹದಲ್ಲಿನ ಆಹಾರ ಹಾಗೂ ರಕ್ತದ ಪೌಷ್ಟಿಕಾಂಶವನ್ನು ಹೀರಿಕೊಳ್ಳುವುದರಿಂದ ವಿವಿಧ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸೋಂಕಿನ ಲಕ್ಷಣಗಳನ್ನು ಅರಿತು, ನಿಗದಿತ ಅವಧಿಯಲ್ಲಿ ಜಂತುಹುಳು ನಿವಾರಣಾ ಮಾತ್ರೆ ಸೇವಿಸುವುದು ಅಗತ್ಯ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೀತ್ ಖೋನಾ ಮಾತನಾಡಿ, ವೈಯಕ್ತಿಕ ಸ್ವಚ್ಛತೆ ಕಾಪಾಡುವುದು, ಶುದ್ಧ ನೀರು ಸೇವಿಸುವುದು ಹಾಗೂ ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳುವುದರಿಂದ ಜಂತುಹುಳು ಸೋಂಕಿನಿಂದ ದೂರವಿರಬಹುದು ಎಂದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಡಾ. ರಾಜೇಂದ್ರ ಎಸ್. ಗಡಾದ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳಲ್ಲಿ ಕರುಳಿನ ಜಂತುಹುಳು ಸೋಂಕು ನಿಯಂತ್ರಿಸುವುದು, ರಕ್ತಹೀನತೆ ಹಾಗೂ ಅಪೌಷ್ಟಿಕತೆ ಕಡಿಮೆ ಮಾಡುವುದು ಮತ್ತು ಮಕ್ಕಳ ದೈಹಿಕ-ಮಾನಸಿಕ ಬೆಳವಣಿಗೆಗೆ ನೆರವಾಗುವುದು ಜಂತುಹುಳು ನಿವಾರಣಾ ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ ಎಂದರು.
ಸೇಂಟ್ ಜಾನ್ಸ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಫಾದರ್ ರಾಜಪ್ಪ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯೆ ಮೇರಿ ಮಸ್ಕರೇನಸ್, ಬೆಟಗೇರಿ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಧುಮತಿ ಪಂಚಮುಖಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಬಳಿಕ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಗಳನ್ನು ವಿತರಿಸಲಾಯಿತು.



