ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಐತಿಹಾಸಿಕ ಲಕ್ಕುಂಡಿ ಗ್ರಾಮದ ಮೂಲಭೂತ ಸೌಲಭ್ಯಗಳ ನಿರ್ವಹಣೆಯಲ್ಲಿ ಆಡಳಿತಾಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ, ಅವರನ್ನು ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು.
ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಎನ್. ಉಮಚಗಿ, ಮಾಜಿ ಸದಸ್ಯ ಮಹೇಶ ಮುಸ್ಕಿನಭಾವಿ, ನಜೀರಅಹ್ಮದ್ ಕಿರಿಟಗೇರಿ, ಗ್ರಾಪಂ ಮಾಜಿ ಸದಸ್ಯ ಬಿ.ಬಿ. ಮಾಡಲಗೇರಿ ಹಾಗೂ ಶಿವಪ್ಪ ಸಜ್ಜನರ ನೇತೃತ್ವದಲ್ಲಿ ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಪ್ರತಿಭಟನೆ ನಡೆಯಿತು.
ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ರಸ್ತೆಗಳ ಸ್ವಚ್ಛತೆ, ಸಾರ್ವಜನಿಕ ವಿದ್ಯುತ್ ವ್ಯವಸ್ಥೆ ಸೇರಿದಂತೆ ಹಲವು ಮೂಲಸೌಕರ್ಯಗಳ ಸಮಸ್ಯೆ ಇದೆ. ಪಂಚಾಯಿತಿ ಸಿಬ್ಬಂದಿಗೆ ವೇತನ ವಿಳಂಬವಾಗುತ್ತಿದ್ದು, ಸಿಬ್ಬಂದಿಯ ಕಾರ್ಯವೈಖರಿಯ ಮೇಲೂ ಸಮರ್ಪಕ ಹಿಡಿತವಿಲ್ಲ.
ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಸೇವೆ ದೊರೆಯುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ ಎನ್ನಲಾದ ವಾಲ್ಮನ್ ವಿರುದ್ಧ ಕ್ರಮ ಕೈಗೊಳ್ಳಲು ಆಡಳಿತಾಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ದೂರಿದರು.
ಆಡಳಿತಾಧಿಕಾರಿಯನ್ನು ಬದಲಾವಣೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಏಳು ದಿನ ಕಳೆದರೂ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಗಿದೆ ಎಂದು ಹೇಳಿದರು.
ಈ ನಡುವೆ ಕುಡಿಯುವ ನೀರು ಹಾಗೂ ಸ್ವಚ್ಛತೆ ಸಮಸ್ಯೆ ಕುರಿತು ಆಡಳಿತಾಧಿಕಾರಿ ಶರಣು ಗೋಗೇರಿ ಹಾಗೂ ಪಿಡಿಒ ಅಮೀರನಾಯಕ ಅವರೊಂದಿಗೆ ಪ್ರತಿಭಟನಾಕಾರರು ವಾಗ್ವಾದ ನಡೆಸಿದರು. ಸಮಸ್ಯೆಗಳನ್ನು ಈಗಾಗಲೇ ಸಿಬ್ಬಂದಿಯೊಂದಿಗೆ ಚರ್ಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಪ್ರತಿಭಟನೆ ಕೈಬಿಡುವಂತೆ ಅಧಿಕಾರಿಗಳು ಮನವಿ ಮಾಡಿದರು.
ಆದರೆ ತಾಲೂಕು ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸ್ಪಷ್ಟ ಭರವಸೆ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದರು.
ಬಳಿಕ ವಿಬಿಜಿ ರಾಮ್‌ಜಿ ಯೋಜನೆಯ ಸಹಾಯಕ ನಿರ್ದೇಶಕ ಕುಮಾರ ಪೂಜಾರ ಸ್ಥಳಕ್ಕೆ ಆಗಮಿಸಿ, ಗ್ರಾಮಸ್ಥರ ಮನವಿಯನ್ನು ಅಧಿಕಾರಿಗಳು ಪರಿಶೀಲಿಸಿದ್ದು, ಜಿಲ್ಲಾಧಿಕಾರಿಗಳು ಆಡಳಿತಾಧಿಕಾರಿ ಬದಲಾವಣೆ ಕುರಿತು ಕ್ರಮ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಪ್ರತಿಭಟನಾಕಾರರು, ಆಡಳಿತಾಧಿಕಾರಿ ಬದಲಾವಣೆಯ ಆದೇಶ ಹೊರಬರದಿದ್ದರೆ ಮತ್ತೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿ ಧರಣಿ ಹಿಂಪಡೆದರು.
ಪ್ರತಿಭಟನೆಯಲ್ಲಿ ಅಶೋಕ ಮೇಟಿ, ಬಸವರಾಜ ಮುಳ್ಳಾಳ, ಬಸವರಾಜ ಕವಲೂರು, ಅಶೋಕ ಗದಗಿನ, ಪ್ರವೀಣ ಕಲಾಲ, ವಿನಾಯಕ ಡಿಗ್ಗಾವಿ, ಚಂದ್ರು ಚಬ್ಬರಭಾವಿ, ಪ್ರಶಾಂತ ಬಟ್ಟೂರ, ವೀರಣ್ಣ ಅರಹುಣಶಿ, ಮಲ್ಲಿಕಾರ್ಜುನ ರಾಯಚೂರು, ನಾಗರಾಜ ಜಾಡರ, ಮಹಮ್ಮದ್ ರಫೀಕ್ ಬೆಟಗೇರಿ, ರವಿ ಕವಲೂರು, ಕಲ್ಮೇಶ ಅಂಬಕ್ಕಿ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.



