ವಿಜಯಸಾಕ್ಷಿ ಸುದ್ದಿ, ಗದಗ: ಗದಗ ನಗರದಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಜೀವಬೆದರಿಕೆ ಹಾಕಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಸ್ವಾಭಿಮಾನಿ ಮಹಿಳಾ ವೇದಿಕೆ ವತಿಯಿಂದ ಮಹಿಳೆಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಮಹಿಳೆಯರು, ನಗರದ ಆರ್.ಕೆ. ನಗರದ ಓಣಿಯಲ್ಲಿ ವಾಸಿಸುತ್ತಿದ್ದ ಕುಟುಂಬದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಜೀವಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿದರು. ಅಲ್ಲದೆ, ಕುಟುಂಬದವರ ಮೇಲೂ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿ ಅಲ್ಲಿಂದ ಹೊರಹಾಕಲಾಗಿದೆ ಎಂದು ದೂರಿದರು.
ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಕೂಡ ಶೀಘ್ರ ಪತ್ತೆಹಚ್ಚಿ ಬಂಧಿಸಬೇಕು. ಸಂತ್ರಸ್ತೆ ಹಾಗೂ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕರ್ನಾಟಕ ಸ್ವಾಭಿಮಾನಿ ಮಹಿಳಾ ವೇದಿಕೆ ರಾಜ್ಯಾಧ್ಯಕ್ಷೆ ವಿಜಯಲಕ್ಷ್ಮೀ ಗದಗ ಮಾತನಾಡಿ, ಮಹಿಳೆಯರು, ಯುವತಿಯರು ಹಾಗೂ ಮಕ್ಕಳ ಮೇಲೆ ಇಂತಹ ದೌರ್ಜನ್ಯಗಳು ಮರುಕಳಿಸದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿ ಸಂತ್ರಸ್ತೆಗೆ ನ್ಯಾಯ ಒದಗಿಸುವ ಜತೆಗೆ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾಧ್ಯಕ್ಷೆ ಮಮತಾಜ ಕಟ್ಟಿಮನಿ ಮಾತನಾಡಿ, ದೌರ್ಜನ್ಯ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಇಂತಹ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ನ್ಯಾಯ ದೊರೆಯುವಂತೆ ಕಾನೂನು ಪ್ರಕ್ರಿಯೆ ಪರಿಣಾಮಕಾರಿಯಾಗಿ ನಡೆಯಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಉಪಾಧ್ಯಕ್ಷೆ ದಾವಲಬಿ ದೊಡ್ಡಮನಿ, ಜಿಲ್ಲಾ ಉಪಾಧ್ಯಕ್ಷರಾದ ಪರವೀನ ಹವಾಲ್ದಾರ, ವಜ್ರೇಶ್ವರಿ ಪವಾರ, ಖಜಾಂಚಿ ಪಾರ್ವತಿ ಪಾಟೀಲ, ವಕ್ತಾರೆ ನಾಗರತ್ನಾ ಬಣಕಾರ, ಸಂಚಾಲಕಿ ಸುಫಿಯಾ ನದಾಫ್, ಸಂಘಟನಾ ಕಾರ್ಯದರ್ಶಿ ಮಂಜುಳಾ ರೊಟ್ಟಿ, ಪ್ರಧಾನ ಕಾರ್ಯದರ್ಶಿ ಬಸೀರಾ ಕುಮನೂರ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ನೂರಾರು ಮಹಿಳೆಯರು ಭಾಗವಹಿಸಿದ್ದರು.
“ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನಿನಡಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಸಂತ್ರಸ್ತೆಗೆ ನ್ಯಾಯ ಹಾಗೂ ಕುಟುಂಬಕ್ಕೆ ರಕ್ಷಣೆ ನೀಡಬೇಕು. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.”
— ವಿಜಯಲಕ್ಷ್ಮೀ ಗದಗ, ರಾಜ್ಯಾಧ್ಯಕ್ಷೆ, ಕರ್ನಾಟಕ ಸ್ವಾಭಿಮಾನಿ ಮಹಿಳಾ ವೇದಿಕೆ

