ಬೆಂಗಳೂರು: ಸ್ಯಾಂಡಲ್ವುಡ್ ನಟಿಯ ಸಹೋದರಿಯೊಬ್ಬರು ನೀಡಿದ ಅತ್ಯಾಚಾರ ಆರೋಪದ ದೂರಿನ ಆಧಾರದ ಮೇಲೆ ಚಂದ್ರಾಲೇಔಟ್ ಪೊಲೀಸರು ರಾಘವೇಂದ್ರ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ತಮ್ಮ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ಹೊಂದಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.
ದೂರುದಾರ ಯುವತಿ ಹಾಗೂ ರಾಘವೇಂದ್ರ ಇಬ್ಬರೂ ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪರಿಚಯವಾಗಿದ್ದರು ಎನ್ನಲಾಗಿದೆ. ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದು, ಪ್ರೀತಿಗೆ ತಿರುಗಿತ್ತು. ಈ ವೇಳೆ ರಾಘವೇಂದ್ರ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದೇ ವೇಳೆ, ರಾಘವೇಂದ್ರ ತಮ್ಮ ಕ್ರೆಡಿಟ್ ಕಾರ್ಡ್ ಬಳಸಿ ಸಾಲ ಪಡೆದಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. ಈ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದ್ದು, ಬಳಿಕ ರಾಘವೇಂದ್ರನ ವೈಯಕ್ತಿಕ ವಿಚಾರಗಳನ್ನು ಪರಿಶೀಲಿಸಿದಾಗ ಆತ ಈಗಾಗಲೇ ಮದುವೆಯಾಗಿರುವುದು ತಿಳಿದುಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ರಾಘವೇಂದ್ರನನ್ನು ಪ್ರಶ್ನಿಸಿದಾಗ, ಯುವತಿಯ ಖಾಸಗಿ ಫೋಟೊಗಳನ್ನು ತೋರಿಸಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ತನ್ನ ಮಾತು ಕೇಳದಿದ್ದರೆ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.
ಈ ಹಿಂದೆಯೂ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ನೀಡಲಾಗಿತ್ತು ಎನ್ನಲಾಗಿದೆ. ಆಗ ಪೊಲೀಸರು ರಾಘವೇಂದ್ರನನ್ನು ಠಾಣೆಗೆ ಕರೆಸಿ, ಯುವತಿಯ ಖಾಸಗಿ ಫೋಟೊಗಳನ್ನು ಅಳಿಸುವಂತೆ ಸೂಚಿಸಿ ಎಚ್ಚರಿಕೆ ನೀಡಿ ಕಳುಹಿಸಿದ್ದರು ಎಂದು ತಿಳಿದುಬಂದಿದೆ.
ಆದರೆ ಕೆಲ ದಿನಗಳ ಬಳಿಕ ರಾಘವೇಂದ್ರ ಕೈ ಕೊಯ್ದುಕೊಂಡಿರುವ ಫೋಟೊ ಹಾಗೂ ಯುವತಿಯ ಖಾಸಗಿ ಫೋಟೊಗಳನ್ನು ಆಕೆಗೆ ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದೆ. ಅಲ್ಲದೆ, ತಾನು ಸೂಚಿಸಿದ ಸ್ಥಳಕ್ಕೆ ಬರುವಂತೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಈ ಬೆಳವಣಿಗೆಗಳ ಬಳಿಕ ಯುವತಿ ಮತ್ತೊಮ್ಮೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಚಂದ್ರಾಲೇಔಟ್ ಪೊಲೀಸರು ರಾಘವೇಂದ್ರನನ್ನು ಬಂಧಿಸಿದ್ದಾರೆ.
ಇದರ ನಡುವೆ ರಾಘವೇಂದ್ರ ಕೂಡ ನಟಿಯ ಸಹೋದರಿ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ನೀಡಿದ್ದಾರೆ. ತಮಗೆ ಹಾಗೂ ತಮ್ಮ ತಾಯಿಗೆ ಕರೆ ಮಾಡಿ ಬೆದರಿಕೆ ಹಾಕಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಸಂಬಂಧ ತಲಘಟ್ಟಪುರ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡು ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಆದರೆ ವಿಚಾರಣೆಗೆ ನಟಿಯ ಸಹೋದರಿ ಹಾಜರಾಗಿಲ್ಲ ಎಂದು ತಿಳಿದುಬಂದಿದೆ.
ಸದ್ಯ ಎರಡೂ ಕಡೆಯಿಂದ ಬಂದಿರುವ ಆರೋಪಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ತನಿಖೆಯಿಂದ ಹೊರಬರಬೇಕಿದೆ.



