ಹಾಸನ: ಎನ್‌ಸಿಆರ್ ಪ್ರಕರಣ ಇತ್ಯರ್ಥಪಡಿಸಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡವಾಗಿ ₹20 ಸಾವಿರ ಸ್ವೀಕರಿಸುತ್ತಿದ್ದ ಹಳೆಬೀಡು ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನವೀನ ಎಂಬುವರಿಂದ ಎನ್‌ಸಿಆರ್ ಪ್ರಕರಣ ಮುಕ್ತಾಯಗೊಳಿಸುವುದಾಗಿ ಹೇಳಿ ಪಿಎಸ್‌ಐ ಮಂಜುನಾಥ್ ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ನವೀನ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು.
ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಹೋಟೆಲ್‌ನಲ್ಲಿ ಮುಂಗಡವಾಗಿ ₹20 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಪಿಎಸ್‌ಐಯನ್ನು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಇನ್ಸ್‌ಪೆಕ್ಟರ್ ಶಿಲ್ಪಾ ಹಾಗೂ ಗವಿರಾಜು ನೇತೃತ್ವದಲ್ಲಿ ದಾಳಿ ನಡೆದಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

