HomeKarnataka Newsಶಾಸಕ ಸುರೇಶ್ ಗೌಡ ಪುತ್ರಿಯಿಂದ ದರ್ಪ: ಮಹಿಳಾ PSI ಗೆ ಕಪಾಳಮೋಕ್ಷ

ಶಾಸಕ ಸುರೇಶ್ ಗೌಡ ಪುತ್ರಿಯಿಂದ ದರ್ಪ: ಮಹಿಳಾ PSI ಗೆ ಕಪಾಳಮೋಕ್ಷ

For Dai;y Updates Join Our whatsapp Group

ಮಂಡ್ಯ: ದೇವಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ಗೆ ಹಲ್ಲೆ ನಡೆಸಿ, ಕಪಾಳಕ್ಕೆ ಹೊಡೆದಿರುವ ಆರೋಪ ಕೇಳಿಬಂದಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ಗ್ರಾಮದಲ್ಲಿ ನಡೆದಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ ವಿರುದ್ಧ ಈ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬುಧವಾರ (ಆ.12) ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಆರತಿ ಉಕ್ಕಡದಲ್ಲಿರುವ ಪ್ರಸಿದ್ಧ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದರು. ಈ ವೇಳೆ ಶಾಸಕ ಬಿ. ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ ಕೂಡ ದೇವಸ್ಥಾನಕ್ಕೆ ಬಂದಿದ್ದರು ಎನ್ನಲಾಗಿದೆ.

ಆರೋಪದ ಪ್ರಕಾರ, ಪ್ರಭಾವ ಬಳಸಿ ಐಶ್ವರ್ಯ ಅವರು ವಿಐಪಿ ಸಾಲಿನಲ್ಲಿ ಪ್ರವೇಶ ಪಡೆದ ಬಳಿಕ ನೇರವಾಗಿ ದೇವರ ಗರ್ಭಗುಡಿಯೊಳಗೆ ತೆರಳಲು ಮುಂದಾಗಿದ್ದಾರೆ. ಈ ವೇಳೆ ದೇವಸ್ಥಾನದ ಭದ್ರತಾ ಕರ್ತವ್ಯದಲ್ಲಿದ್ದ ಕ್ಯಾತನಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಸವಿತಾ ಅವರು ಅವರನ್ನು ತಡೆದಿದ್ದಾರೆ.

ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚಿರುವುದರಿಂದ ಸದ್ಯ ಗರ್ಭಗುಡಿಯೊಳಗೆ ತೆರಳಲು ಸಾಧ್ಯವಿಲ್ಲ ಎಂದು ಪಿಎಸ್‌ಐ ಸವಿತಾ ತಿಳಿಸಿದ್ದರು ಎನ್ನಲಾಗಿದೆ. ಇದೇ ವೇಳೆ ಮಫ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಲ್ ಇನ್ಸ್‌ಪೆಕ್ಟರ್ ಲಕ್ಷ್ಮಿ ಅವರು ಗರ್ಭಗುಡಿಯ ಕಡೆಗೆ ತೆರಳಿದ್ದಾರೆ. ಇದನ್ನು ಗಮನಿಸಿದ ಐಶ್ವರ್ಯ, ಅವರನ್ನು ಒಳಗೆ ಹೇಗೆ ಬಿಡಲಾಗಿದೆ ಎಂದು ಪಿಎಸ್‌ಐ ಸವಿತಾ ಅವರನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಅದಕ್ಕೆ ಪಿಎಸ್‌ಐ ಸವಿತಾ, ಅವರು ನಮ್ಮ ಸರ್ಕಲ್ ಇನ್ಸ್‌ಪೆಕ್ಟರ್ ಆಗಿದ್ದು, ಕರ್ತವ್ಯದಲ್ಲಿರುವ ಕಾರಣ ಒಳಗೆ ತೆರಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ತಮಗೂ ಗರ್ಭಗುಡಿಯೊಳಗೆ ತೆರಳಲು ಅವಕಾಶ ನೀಡಬೇಕು ಎಂದು ಐಶ್ವರ್ಯ ಪಟ್ಟು ಹಿಡಿದಿದ್ದು, ಈ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದೆ.

ವಾಗ್ವಾದ ತೀವ್ರಗೊಂಡ ಸಂದರ್ಭದಲ್ಲಿ ಐಶ್ವರ್ಯ ಅವರು ಕರ್ತವ್ಯದಲ್ಲಿದ್ದ ಪಿಎಸ್‌ಐ ಸವಿತಾ ಅವರ ಕಪಾಳಕ್ಕೆ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯ ಬಳಿಕ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ ನಡೆಸಿದ ಆರೋಪದಡಿ ಐಶ್ವರ್ಯ ವಿರುದ್ಧ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ದೇವಸ್ಥಾನದಲ್ಲಿದ್ದವರ ಹೇಳಿಕೆಗಳು ಹಾಗೂ ಲಭ್ಯವಿರುವ ಇತರ ಮಾಹಿತಿಯನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img