ಲಕ್ಷ್ಮೇಶ್ವರ: ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ KSRTC ಬಸ್ ಬೈಕ್‌ಗೆ ಸೈಡ್ ಕೊಡಲು ಹೋಗಿ ಪಲ್ಟಿಯಾದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸಮೀಪದ ಶಿಗ್ಲಿ ಬಳಿ ನಡೆದಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಹೊಸರಿತ್ತಿಯಿಂದ ಲಕ್ಷ್ಮೇಶ್ವರಕ್ಕೆ ಬರುತ್ತಿದ್ದ ಬಸ್‌ನಲ್ಲಿ ಗ್ರಾಮೀಣ ಭಾಗಗಳಿಂದ ಶಿಗ್ಲಿ ಬಳಿಯ ಕಾಲೇಜು ಹಾಗೂ ಲಕ್ಷ್ಮೇಶ್ವರದ ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಬಸ್ ಚಲಿಸುತ್ತಿದ್ದ ವೇಳೆ ಬೈಕ್‌ಗೆ ಸೈಡ್ ಕೊಡಲು ಹೋಗಿದಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ.
ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳಿಗೆ ಲಕ್ಷ್ಮೇಶ್ವರ ಹಾಗೂ ಶಿಗ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗದಗ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಬಸ್‌ನ ವೇಗ ಕಡಿಮೆ ಇದ್ದಿದ್ದರಿಂದ ಭಾರೀ ಅನಾಹುತ ತಪ್ಪಿದೆ ಎನ್ನಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೂದಲೆಳೆ ಅಂತರದಲ್ಲಿ ಭಾರೀ ದುರಂತ ತಪ್ಪಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಅವರ ಸುರಕ್ಷತೆ ಕುರಿತು ಪೋಷಕರಲ್ಲಿ ಆತಂಕ ಮೂಡಿದೆ. ಘಟನೆ ಸವಣೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.



