ನವದೆಹಲಿ: ವಿನಾಯಕ ದಾಮೋದರ್ ಸಾವರ್ಕರ್ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹಾಗೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ ಅನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ರಾಹುಲ್ ಗಾಂಧಿ ಅವರು ರ‍್ಯಾಲಿಯೊಂದರಲ್ಲಿ ಸಾವರ್ಕರ್ ಅವರನ್ನು ಉದ್ದೇಶಪೂರ್ವಕವಾಗಿ ಅವಮಾನಿಸಿದ್ದಾರೆ ಎಂದು ಆರೋಪಿಸಿ ವಕೀಲ ನೃಪೇಂದ್ರ ಪಾಂಡೆ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಲಕ್ನೋ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿತ್ತು.
ಈ ಪ್ರಕರಣವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರಿದ್ದ ಪೀಠವು, ಪ್ರಕರಣ ದಾಖಲಿಸಲು ಅಗತ್ಯವಿದ್ದ ಕಾನೂನುಬದ್ಧ ಅನುಮತಿಯ ಕೊರತೆಯನ್ನು ಪ್ರಮುಖವಾಗಿ ಪರಿಗಣಿಸಿದೆ. ಇಂತಹ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ನಡೆಸಲು ಕಾನೂನಿನ ಅಡಿಯಲ್ಲಿ ಸರ್ಕಾರದ ಪೂರ್ವಾನುಮತಿ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಪೀಠ ಸ್ಪಷ್ಟಪಡಿಸಿದೆ.
ಆದರೆ, ಈ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರದಿಂದ ಅಗತ್ಯವಾದ ಅನುಮತಿ ಪಡೆಯಲಾಗಿಲ್ಲ. ಅನುಮತಿ ಇಲ್ಲದಿರುವುದರಿಂದ ಪ್ರಕರಣ ಮುಂದುವರಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರು ರಾಜ್ಯ ಸರ್ಕಾರ ಹಾಗೂ ದೂರುದಾರರಿಗೆ ತಿಳಿಸಿದ್ದಾರೆ. ‘ಕಾನೂನನ್ನು ಪಾಲಿಸಲೇಬೇಕು’ ಎಂದು ಪೀಠ ಸ್ಪಷ್ಟಪಡಿಸಿದೆ.
ಲಕ್ನೋ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ ಹಾಗೂ ನೃಪೇಂದ್ರ ಪಾಂಡೆ ದಾಖಲಿಸಿದ್ದ ದೂರನ್ನು ಸುಪ್ರೀಂ ಕೋರ್ಟ್ ಸಂಪೂರ್ಣವಾಗಿ ರದ್ದುಗೊಳಿಸಿದೆ.
ಈ ಹಿಂದೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಸಮನ್ಸ್ ರದ್ದುಗೊಳಿಸಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಉತ್ತರ ಪ್ರದೇಶ ಸರ್ಕಾರವು ರಾಹುಲ್ ಗಾಂಧಿ ವಿರುದ್ಧ ಆರೋಪ ಮಾಡಿತ್ತು. ಸಮಾಜದಲ್ಲಿ ದ್ವೇಷ ಹಾಗೂ ವೈಷಮ್ಯ ಹರಡುವ ಉದ್ದೇಶದಿಂದಲೇ ರಾಹುಲ್ ಗಾಂಧಿ ಪೂರ್ವಯೋಜಿತವಾಗಿ ಹೇಳಿಕೆ ನೀಡಿದ್ದಾರೆ ಎಂದು ಸರ್ಕಾರ ವಾದಿಸಿತ್ತು.
ಆದರೆ, ಪ್ರಕರಣದ ವಿಚಾರಣೆಗೆ ಅಗತ್ಯವಿರುವ ಅಧಿಕೃತ ಪೂರ್ವಾನುಮತಿ ಇಲ್ಲದಿರುವುದನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಕೆಳ ನ್ಯಾಯಾಲಯದ ಸಮನ್ಸ್ ಹಾಗೂ ಮೂಲ ದೂರನ್ನೇ ರದ್ದುಗೊಳಿಸಿದೆ.



