HomeKarnataka Newsಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 72,000 ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ – ಡಿಕೆಶಿ

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 72,000 ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ – ಡಿಕೆಶಿ

For Dai;y Updates Join Our whatsapp Group

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ನೆರವಾಗುವ ಉದ್ದೇಶದಿಂದ ರಾಜ್ಯದಲ್ಲಿ 72 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆರು ತಿಂಗಳೊಳಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ಶಿಕ್ಷಣ, ಆರ್ಥಿಕತೆ ಹಾಗೂ ಆಡಳಿತ ಕ್ಷೇತ್ರದಲ್ಲಿ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಅವರು ಭರವಸೆ ನೀಡಿದರು.

ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 7.5 ಕೋಟಿ ಕನ್ನಡಿಗರು ಹಾಗೂ ಸಮಸ್ತ ಭಾರತೀಯರಿಗೆ 80ನೇ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ಕೋರಿದರು.

ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲು 72 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆರು ತಿಂಗಳೊಳಗೆ ಅಧಿಸೂಚನೆ ಹೊರಡಿಸಲಾಗುವುದು. ಖಾಸಗಿ ವಲಯದಲ್ಲಿ ಉದ್ಯೋಗ ಪಡೆಯಲು ಯುವಕರಿಗೆ ನೆರವಾಗುವ ‘ಯುವ ಉದ್ಯೋಗ ಸೇತು’ ಯೋಜನೆ ಜಾರಿಗೆ ತರಲಾಗುವುದು. ಹಿಂದುಳಿದ 10 ಜಿಲ್ಲೆಗಳಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಮಾಸಿಕ ₹2,500 ಪ್ರೋತ್ಸಾಹಧನ ನೀಡುವ ‘ಉದ್ಯೋಗ ನಿಧಿ’ ಯೋಜನೆಯನ್ನು ಘೋಷಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ AIಗೆ ಆದ್ಯತೆ

ಶಿಕ್ಷಣ ಕ್ಷೇತ್ರದಲ್ಲೂ ಹಲವು ಮಹತ್ವದ ಯೋಜನೆಗಳನ್ನು ಪ್ರಕಟಿಸಿದ ಡಿ.ಕೆ. ಶಿವಕುಮಾರ್, ಆರನೇ ತರಗತಿಯಿಂದಲೇ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ (AI) ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ ಸ್ಥಾಪಿಸುವ ಗುರಿ ಹೊಂದಲಾಗಿದೆ. ಗ್ರಾಮೀಣ ಸರ್ಕಾರಿ ಶಾಲೆಗಳ ಮಕ್ಕಳಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಶೇ.7.5ರಷ್ಟು ವಿಶೇಷ ಮೀಸಲಾತಿ ನೀಡಲಾಗುವುದು. ಯುವಕರಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ಸೇವಾ ಮನೋಭಾವ ಬೆಳೆಸುವ ಉದ್ದೇಶದಿಂದ 10 ಸಾವಿರ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ಒಕ್ಕೂಟ ತತ್ವ ಮತ್ತಷ್ಟು ಗಟ್ಟಿಯಾಗಲಿ

ಭಾರತವನ್ನು ಒಂದು ಭವ್ಯ ದೇಗುಲಕ್ಕೆ ಹೋಲಿಸಿದರೆ, ರಾಜ್ಯಗಳು ಅದರ ಭದ್ರ ಬುನಾದಿಯ ಕಂಬಗಳಿದ್ದಂತೆ. ದೇಶದ ಅಭಿವೃದ್ಧಿಗೆ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಒಕ್ಕೂಟ ತತ್ವವನ್ನು ಮತ್ತಷ್ಟು ಗಟ್ಟಿಗೊಳಿಸಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದರು.

ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶದ ಗಡಿಗಳನ್ನು ಕಾಯುತ್ತಿರುವ ವೀರ ಸೈನಿಕರ ತ್ಯಾಗವನ್ನು ಸ್ಮರಿಸಿದ ಅವರು, ಕಾಯಕ, ಸಮಾನತೆ ಮತ್ತು ದಾಸೋಹದ ತತ್ವಗಳಡಿ ಸರ್ವರನ್ನೂ ಒಳಗೊಂಡ ಆಡಳಿತ ನೀಡುವುದು ತಮ್ಮ ಸರ್ಕಾರದ ಸಂಕಲ್ಪವಾಗಿದೆ ಎಂದು ತಿಳಿಸಿದರು.

2047ರ ವೇಳೆಗೆ ₹320 ಲಕ್ಷ ಕೋಟಿ ಆರ್ಥಿಕತೆಯ ಗುರಿ

ಪಂಡಿತ್ ಜವಾಹರಲಾಲ್ ನೆಹರೂ ಅವರ ‘ನವ ಭಾರತ’ದ ಕಲ್ಪನೆಯಂತೆ ‘ಯುವ ಕರ್ನಾಟಕ–ನವ ಭಾರತ’ ಎಂಬ ಧ್ಯೇಯದೊಂದಿಗೆ ರಾಜ್ಯವನ್ನು ಮುನ್ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

2047ರ ವೇಳೆಗೆ ಕರ್ನಾಟಕದ ಆರ್ಥಿಕತೆಯನ್ನು ₹320 ಲಕ್ಷ ಕೋಟಿಗೆ ಕೊಂಡೊಯ್ಯುವ ಗುರಿಯನ್ನು ಸರ್ಕಾರ ಹೊಂದಿದೆ. ಯುವಕರಿಗೆ ಹೆಚ್ಚಿನ ಅವಕಾಶಗಳು, ಉದ್ಯೋಗ ಸೃಷ್ಟಿ ಹಾಗೂ ಸಮಗ್ರ ಅಭಿವೃದ್ಧಿಯ ಮೂಲಕ ಈ ಗುರಿ ಸಾಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜನರ ಮನೆಬಾಗಿಲಿಗೆ ಆಡಳಿತ

ಆಡಳಿತವನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ‘ಪ್ರಜಾಸೇವೆ ಇಲಾಖೆ’ ಸ್ಥಾಪಿಸಲಾಗಿದ್ದು, ಸಚಿವರು ಮತ್ತು ಶಾಸಕರ ನೇತೃತ್ವದಲ್ಲಿ ನಿರಂತರ ಪ್ರಜಾಸಂಪರ್ಕ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಅವುಗಳಿಗೆ ತ್ವರಿತವಾಗಿ ಸ್ಪಂದಿಸುವ ಮೂಲಕ ಜನಪರ ಹಾಗೂ ಸರ್ವರನ್ನೂ ಒಳಗೊಂಡ ಆಡಳಿತ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img