ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ಬೆಟ್ಟಕ್ಕೆ ವೀಕೆಂಡ್ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ 26 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ನರೇಶ್ ಎಂದು ಗುರುತಿಸಲಾಗಿದೆ.
ನರೇಶ್ ಮೂಲತಃ ಕಲಬುರಗಿ ಜಿಲ್ಲೆಯವರಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ವೀಕೆಂಡ್ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಮೂಡಿಗೆರೆ ತಾಲೂಕಿನ ದೇವರಮನೆ ಬೆಟ್ಟಕ್ಕೆ ಬೈಕ್‌ನಲ್ಲಿ ಪ್ರವಾಸಕ್ಕೆ ಬಂದಿದ್ದರು.
ದೇವರಮನೆ ಬೆಟ್ಟದ ಸೌಂದರ್ಯ ಸವಿದ ಬಳಿಕ ಸ್ನೇಹಿತರೊಂದಿಗೆ ಹಿಂದಿರುಗುತ್ತಿದ್ದ ವೇಳೆ ಮಾರ್ಗ ಮಧ್ಯೆ ತುಂತುರು ಮಳೆ ಆರಂಭವಾಗಿದೆ. ಈ ವೇಳೆ ಮಳೆಯಿಂದ ರಕ್ಷಿಸಿಕೊಳ್ಳಲು ಕೋಟ್ ಹಾಕಿಕೊಳ್ಳಲು ನರೇಶ್ ಬೈಕ್ ನಿಲ್ಲಿಸಿದ್ದಾರೆ. ಕೋಟ್ ಹಾಕಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ.
ತಕ್ಷಣವೇ ನರೇಶ್ ಅವರ ಸ್ನೇಹಿತರು ಹಾಗೂ ಸ್ಥಳೀಯರು ಅವರನ್ನು ಸಮಾಜ ಸೇವಕ ಆರೀಫ್ ಅವರ ಆಂಬುಲೆನ್ಸ್ ಮೂಲಕ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನರೇಶ್ ಮೃತಪಟ್ಟಿದ್ದಾರೆ.
ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ನರೇಶ್ ಮೃತಪಟ್ಟಿರುವುದರಿಂದ ಅವರ ಸ್ನೇಹಿತರು ಕಣ್ಣೀರಿಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.



