ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಶನಿವಾರ ಸಂಭ್ರಮ ಹಾಗೂ ದೇಶಭಕ್ತಿ ಭಾವನೆಯೊಂದಿಗೆ ಆಚರಿಸಲಾಯಿತು.
ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಮುಖ್ಯಾಧಿಕಾರಿ ಮಲ್ಲೇಶ ಪಚ್ಚಿ ಧ್ವಜಾರೋಹಣ ನೆರವೇರಿಸಿದರು. ಇದೇ ವೇಳೆ ಗ್ರಂಥಾಲಯದಲ್ಲಿ ಪಟ್ಟಣ ಪಂಚಾಯಿತಿಯ ಕಿರಿಯ ಅಭಿಯಂತರ ಜಡೆಪ್ಪ ನಾಡಿಗರ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅಧಿಕಾರಿಗಳು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನವನ್ನು ಸ್ಮರಿಸಿ, ದೇಶದ ಪ್ರಗತಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ವಿದ್ಯಾರ್ಥಿಗಳು ಶಿಸ್ತು, ಸಂಯಮ ಹಾಗೂ ಶಾಂತಿಯಿಂದ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೇಶದ ಜವಾಬ್ದಾರಿಯುತ ನಾಗರಿಕರಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಾದ ಎಂ.ಎಚ್. ಸೀತಿಮನಿ, ರಮೇಶ ಹಲಗಿ, ಶಂಕ್ರಪ್ಪ ದೊಡ್ಡಣ್ಣವರ, ಮಂಜುನಾಥ ಕೊಂಡಗುರಿ, ನೀಲಪ್ಪ ಚಳ್ಳಮರದ, ರಕ್ಷಿತ ಎಲ್., ಆರೀಫಬೇಗ ಮಿರ್ಜಾ, ನಾಜೀಮಾ ಬೇಲೆರಿ, ಎ.ಎಸ್. ಮೆಣಸಗಿ, ನೀರು ಸರಬರಾಜು ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದೇ ವೇಳೆ ಉಪ ತಹಶೀಲ್ದಾರ್ ನಾಡ ಕಚೇರಿ, ಗ್ರಂಥಾಲಯ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿಯೂ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಅಂಗನವಾಡಿ ಕಾರ್ಯಕರ್ತರು, ಮಕ್ಕಳು, ಶಾಲೆಗಳ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು, ಶಿಕ್ಷಕರು, ಪೊಲೀಸ್ ಸಿಬ್ಬಂದಿ ಮತ್ತು ಪಟ್ಟಣದ ಗ್ರಾಮಸ್ಥರು ಭಾಗವಹಿಸಿದ್ದರು.



