ಬೆಂಗಳೂರು: ಸುರಂಗ ರಸ್ತೆ ಯೋಜನೆಗೆ ವಿರೋಧ ವ್ಯಕ್ತಪಡಿಸಿ ವಾಕರ್ಸ್ ಅಸೋಸಿಯೇಷನ್ ಸದಸ್ಯರು ಲಾಲ್ಬಾಗ್ನಲ್ಲಿ ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿದರು.
‘ಬಂಡೆಯನ್ನು ತಬ್ಬಿಕೊಳ್ಳಿ’ ಅಭಿಯಾನದಡಿ ಲಾಲ್ಬಾಗ್ನಲ್ಲಿರುವ ಬಂಡೆಯನ್ನು ತಬ್ಬಿಕೊಂಡು ‘ಲಾಲ್ಬಾಗ್ ಉಳಿಸಿ’ ಎಂದು ಘೋಷಣೆ ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸುರಂಗ ರಸ್ತೆ ಯೋಜನೆಯಿಂದ ಲಾಲ್ಬಾಗ್ಗೆ ಹಾನಿಯಾಗುವ ಸಾಧ್ಯತೆ ಇದೆ. ಯಾವುದೇ ಕಾರಣಕ್ಕೂ ಐತಿಹಾಸಿಕ ಉದ್ಯಾನವನಕ್ಕೆ ಧಕ್ಕೆ ಆಗಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ವೇಳೆ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಲು ಅವಕಾಶ ಇಲ್ಲ ಎಂದು ಪೊಲೀಸರು ತಿಳಿಸಿ ಪ್ರತಿಭಟನಾಕಾರರನ್ನು ಸ್ಥಳದಿಂದ ತೆರಳುವಂತೆ ಸೂಚಿಸಿದರು. ಬಳಿಕ ಮುಂದಿನ ದಿನಗಳಲ್ಲಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿ ವಾಕರ್ಸ್ ಸ್ಥಳದಿಂದ ತೆರಳಿದರು.
ಈ ಹಿಂದೆ ಇದೇ ವಿಚಾರವಾಗಿ ಮಾನವ ಸರಪಳಿ ರಚಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದ ವಾಕರ್ಸ್, ಮತ್ತೊಮ್ಮೆ ಲಾಲ್ಬಾಗ್ ಸಂರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.



