ತುಮಕೂರು: ಶಾಲೆ ಆರಂಭಕ್ಕೂ ಮುನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ 4ನೇ ತರಗತಿ ವಿದ್ಯಾರ್ಥಿಯೊಬ್ಬನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಮೃತಪಟ್ಟಿರುವ ಆಘಾತಕಾರಿ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬೆಳಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮತ್ತಿಘಟ್ಟ ಗ್ರಾಮದ ಆನಂದ್ ಮೂರ್ತಿ ಅವರ ಮಗ ಧನುಷ್ (10) ದುರಂತದಲ್ಲಿ ಮೃತಪಟ್ಟಿದ್ದಾನೆ. ಬೆಳಗಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಧನುಷ್ 4ನೇ ತರಗತಿ ಓದುತ್ತಿದ್ದ.
ಇಂದು ಬೆಳಗ್ಗೆ ಶಾಲೆಗೆ ಆಗಮಿಸಿದ್ದ ಬಾಲಕ, ತರಗತಿ ಆರಂಭಕ್ಕೂ ಮುನ್ನ ಶಾಲಾ ಆವರಣದಲ್ಲಿ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ. ಈ ವೇಳೆ ಶಾಲೆಯ ಪಕ್ಕದಲ್ಲಿರುವ ನಂದಿನಿ ಹಾಲಿನ ಡೈರಿ ಕಟ್ಟಡದ ಪಿಲ್ಲರ್ ಇದ್ದಕ್ಕಿದ್ದಂತೆ ಕುಸಿದು ಬಾಲಕನ ಮೇಲೆ ಬಿದ್ದಿದೆ.
ಪಿಲ್ಲರ್ ತಲೆಯ ಮೇಲೆ ಬಿದ್ದ ಪರಿಣಾಮ ಧನುಷ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಬೆಳಗ್ಗೆ 9.30ರ ಸುಮಾರಿಗೆ ಈ ದುರ್ಘಟನೆ ನಡೆದಿದೆ.
ಘಟನೆ ಕುರಿತು ಮಾಹಿತಿ ಪಡೆದ ಹಂದನಕೆರೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕಟ್ಟಡ ನಿರ್ಮಾಣದ ವೇಳೆ ಕಳಪೆ ಕಾಮಗಾರಿ ನಡೆಸಿರುವುದೇ ಪಿಲ್ಲರ್ ಕುಸಿತಕ್ಕೆ ಕಾರಣ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.



