ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮೀಣ ಜನರ ಮೂಲಭೂತ ಸೇವೆಗಳನ್ನು ನಿರಂತರವಾಗಿ ಒದಗಿಸುತ್ತಿರುವ ಗ್ರಾಮ ಪಂಚಾಯಿತಿ ನೌಕರರ ಬದುಕು ಮಾತ್ರ ಸಂಕಷ್ಟದಲ್ಲಿದೆ. ದಿನದಿಂದ ದಿನಕ್ಕೆ ಬೆಲೆ ಏರಿಕೆಯಾಗುತ್ತಿದ್ದರೂ ಕಳೆದ 7–8 ವರ್ಷಗಳಿಂದ ವೇತನ ಪರಿಷ್ಕರಣೆಯಾಗಿಲ್ಲ. ಹೀಗಾಗಿ ಬೆಲೆ ಏರಿಕೆಗೆ ತಕ್ಕಂತೆ ವೇತನ ಹೆಚ್ಚಿಸಿ, ನಮ್ಮ ಬದುಕಿಗೂ ಬೆಲೆ ನೀಡಿ ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ ನೌಕರರು, ಗ್ರಾಮ ಪಂಚಾಯಿತಿಗಳಲ್ಲಿ ಕರವಸೂಲಿಗಾರರು, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ಗಳು, ನೀರುಗಂಟಿಗಳು, ಜವಾನರು ಹಾಗೂ ಸ್ವಚ್ಛತಾಗಾರರು ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಸಮರ್ಪಕ ವೇತನ ದೊರೆಯುತ್ತಿಲ್ಲ. ಪ್ರಸ್ತುತ ವೇತನದಲ್ಲಿ ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಕುಟುಂಬ ನಿರ್ವಹಣೆ ಕಷ್ಟವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮೇ 22, 2026ರಂದು ಹೊರಡಿಸಿರುವ ಆದೇಶದಂತೆ ಪರಿಷ್ಕೃತ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಗ್ರಾಮ ಪಂಚಾಯಿತಿ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಿ, ಸೇವಾ ಹಿರಿತನ ಆಧರಿಸಿ ಇನ್ಕ್ರಿಮೆಂಟ್ ನೀಡಬೇಕು ಎಂದು ಆಗ್ರಹಿಸಿದರು.
ನೌಕರರು ನಿವೃತ್ತಿ ಹೊಂದಿದಾಗ ಅಥವಾ ಮೃತಪಟ್ಟಾಗ ₹6 ಲಕ್ಷ ಇಡಗಂಟು ನೀಡಬೇಕು. ಗ್ರಾಮ ಪಂಚಾಯಿತಿ ಠರಾವಿನ ಮೂಲಕ ನೇಮಕಗೊಂಡು ಜಿಲ್ಲಾ ಪಂಚಾಯಿತಿಯಿಂದ ಅನುಮೋದನೆ ಪಡೆಯದ ಸಿಬ್ಬಂದಿಗೂ ಈ ಸೌಲಭ್ಯ ಕಲ್ಪಿಸಬೇಕು. ತರಬೇತಿ ಪಡೆದ ಸ್ವಚ್ಛವಾಹಿನಿ ನೌಕರರಿಗೆ ವೇತನ ನೀಡುವುದರ ಜತೆಗೆ ಒಡಂಬಡಿಕೆ ಹಾಗೂ ಪ್ರತಿವರ್ಷ ನವೀಕರಣ ಪದ್ಧತಿ ರದ್ದುಪಡಿಸಿ, 15ನೇ ಹಣಕಾಸಿನಡಿ ವೇತನ ಪಾವತಿಸಬೇಕು ಎಂದು ಒತ್ತಾಯಿಸಿದರು.
ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬ ಚಾಲಕನನ್ನು ಪರಿಗಣಿಸಿ ₹15 ಸಾವಿರ ವೇತನ ನಿಗದಿಪಡಿಸಬೇಕು. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್ಗಳನ್ನು ಮುಂದುವರಿಸಬೇಕು. ಕಂಪ್ಯೂಟರ್ ಜ್ಞಾನ ಮತ್ತು ವಿದ್ಯಾರ್ಹತೆ ಹೊಂದಿರುವ ಪಂಚಾಯಿತಿ ನೌಕರರಿಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಪಂಚಾಯಿತಿಯ ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆ ನಿಗದಿಪಡಿಸಿ, 2017ರೊಳಗೆ ನೇಮಕಗೊಂಡ ಹೆಚ್ಚುವರಿ ಕರವಸೂಲಿಗಾರರಿಗೆ ಅನುಮೋದನೆ ನೀಡಬೇಕು. ಖಾಲಿ ಇರುವ ಕರವಸೂಲಿಗಾರ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ನೀರುಗಂಟಿ, ಜವಾನ ಹಾಗೂ ಸ್ವಚ್ಛತಾಗಾರರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.
ಗ್ರೇಡ್-1 ಕಾರ್ಯದರ್ಶಿಗಳಿಂದ ಪಿಡಿಒ ಹುದ್ದೆಗೆ ಜಿಲ್ಲಾ ಮಟ್ಟದಲ್ಲಿ ಮುಂಬಡ್ತಿಗೆ ಅವಕಾಶ ನೀಡಬೇಕು. ಪ್ರತಿ ಗ್ರಾಮ ಪಂಚಾಯಿತಿಗೆ ಲೆಕ್ಕ ಸಹಾಯಕ ಹುದ್ದೆ ಸೃಷ್ಟಿಸಬೇಕು. ಕೆಸಿಎಸ್ಆರ್ ನಿಯಮ 325ರನ್ವಯ ಹಿಂದಿನ ಸೇವೆಯನ್ನು ಪರಿಗಣಿಸಿ ಹಳೆ ಪಿಂಚಣಿ ಜಾರಿಗೊಳಿಸಬೇಕು. ಜನಸಂಖ್ಯೆ ಆಧರಿಸಿ ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಿ, ಪಿಡಿಒ ಹುದ್ದೆಗಳಲ್ಲಿ ಶೇ.60ರಷ್ಟು ಸ್ಥಾನಗಳನ್ನು ಗ್ರೇಡ್-1 ಕಾರ್ಯದರ್ಶಿಗಳಿಗೆ ನೀಡಬೇಕು ಎಂದು ಒತ್ತಾಯಿಸಿದರು.
ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶೀಘ್ರ ಈಡೇರಿಸಬೇಕು. ಇಲ್ಲವಾದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಸಂಘದ ಪದಾಧಿಕಾರಿಗಳು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿ.ಎಂ. ಜೈನಖಾನ್, ಪ್ರಧಾನ ಕಾರ್ಯದರ್ಶಿ, ರುದ್ರಪ್ಪ ಕಂದಗಲ್ಲ ಹಾಗೂ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಮತ್ತು ಸಿಐಟಿಯು ಪದಾಧಿಕಾರಿಗಳು ಉಪಸ್ಥಿತರಿದ್ದರು.
“ಕಳೆದ 7–8 ವರ್ಷಗಳಿಂದ ವೇತನ ಪರಿಷ್ಕರಣೆಯಾಗಿಲ್ಲ. ಇಂದಿನ ಬೆಲೆ ಏರಿಕೆಯ ಪರಿಸ್ಥಿತಿಯಲ್ಲಿ ಈಗಿರುವ ವೇತನದಲ್ಲಿ ಮಕ್ಕಳ ಶಿಕ್ಷಣ, ಆರೋಗ್ಯ ಸೇರಿದಂತೆ ಕುಟುಂಬ ನಿರ್ವಹಣೆ ಸಾಧ್ಯವಾಗುತ್ತಿಲ್ಲ. ಬೆಲೆ ಏರಿಕೆಗೆ ಅನುಗುಣವಾಗಿ ಪರಿಷ್ಕೃತ ವೇತನವನ್ನು ಕೂಡಲೇ ಬಿಡುಗಡೆ ಮಾಡಿ, ದುಡಿಯುವ ಗ್ರಾಮ ಪಂಚಾಯಿತಿ ನೌಕರರ ಬದುಕಿಗೆ ಸರ್ಕಾರ ನ್ಯಾಯ ಒದಗಿಸಬೇಕು.”
— ಎಂ.ಬಿ. ನಾಡಗೌಡ, ಸಂಘದ ಮುಖಂಡ

