ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ, ರಾಜ್ಯದ ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ (67) ಅವರು ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಿಧನರಾದರು.
ಕಳೆದ ಕೆಲಕಾಲದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಬಿ.ಸಿ. ನಾಗೇಶ್ ಅವರು ಬೆಂಗಳೂರಿನ ಜಯನಗರದಲ್ಲಿರುವ ಪುತ್ರಿಯ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ರಾತ್ರಿ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಬಿ.ಸಿ. ನಾಗೇಶ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯ ರಾಜಕೀಯ ವಲಯದಲ್ಲಿ ಸಂತಾಪ ವ್ಯಕ್ತವಾಗಿದೆ. ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಬೊಮ್ಮಾಯಿ ಸರ್ಕಾರದಲ್ಲಿ ಸಚಿವರಾಗಿದ್ದ ನಾಗೇಶ್:
ಬಿ.ಸಿ. ನಾಗೇಶ್ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ 2021ರಿಂದ 2023ರವರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಹಲವು ಪ್ರಮುಖ ನಿರ್ಧಾರಗಳ ಮೂಲಕ ಗಮನ ಸೆಳೆದಿದ್ದರು. ಪಕ್ಷದ ಸಂಘಟನೆಯಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ಬಿಜೆಪಿಯ ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದರು.
ಎರಡು ಬಾರಿ ತಿಪಟೂರು ಶಾಸಕರಾಗಿದ್ದರು:
ತುಮಕೂರು ಜಿಲ್ಲೆಯ ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎರಡು ಬಾರಿ ಬಿ.ಸಿ. ನಾಗೇಶ್ ಅವರು ವಿಧಾನಸಭೆಗೆ ಆಯ್ಕೆಯಾಗಿದ್ದರು. ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಹಾಗೂ ಸಾರ್ವಜನಿಕ ಕೆಲಸಗಳ ಮೂಲಕ ತಮ್ಮದೇ ಆದ ರಾಜಕೀಯ ಛಾಪು ಮೂಡಿಸಿದ್ದರು.
2023ರ ವಿಧಾನಸಭಾ ಚುನಾವಣೆಯಲ್ಲಿ ಅವರು ಸೋಲು ಅನುಭವಿಸಿದ್ದರು.
ಇಂದು ತಿಪಟೂರಿಗೆ ಪಾರ್ಥಿವ ಶರೀರ ರವಾನೆ:
ಬಿ.ಸಿ. ನಾಗೇಶ್ ಅವರ ಪಾರ್ಥಿವ ಶರೀರವನ್ನು ಮಂಗಳವಾರ ರಾತ್ರಿ ಬೆಂಗಳೂರಿನಿಂದ ಅವರ ಸ್ವಕ್ಷೇತ್ರ ತಿಪಟೂರಿಗೆ ರವಾನಿಸಲಾಗುತ್ತಿದೆ. ಬುಧವಾರ, ಆಗಸ್ಟ್ 19ರಂದು ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
ಮಾಜಿ ಸಚಿವರ ನಿಧನದಿಂದ ತಿಪಟೂರು ಸೇರಿದಂತೆ ರಾಜ್ಯದಾದ್ಯಂತ ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಹಾಗೂ ರಾಜಕೀಯ ಸಹೋದ್ಯೋಗಿಗಳು ದುಃಖತಪ್ತರಾಗಿದ್ದಾರೆ.



