ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ತಾಲೂಕಿನ ಬೆಣಕಲ್ಲು ಗ್ರಾಮದಲ್ಲಿ ಕಾಡುಹಂದಿಗಳ ಹಾವಳಿ ಹೆಚ್ಚಾಗಿದ್ದು, ರೈತರ ಮೆಕ್ಕೆಜೋಳ ಬೆಳೆಗಳಿಗೆ ಹಾನಿಯಾಗಿದೆ.
ಗ್ರಾಮದ ರೈತ ಟಿ. ಮೇಘರಾಜ ಅವರು 2.50 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬೆಳೆಯನ್ನು ಕಾಡುಹಂದಿಗಳು ಹಾಳು ಮಾಡಿವೆ. ತೆನೆ ಬರುವ ಹಂತದಲ್ಲಿದ್ದ ಬೆಳೆಯ ಬಹುತೇಕ ಭಾಗ ನಾಶವಾಗಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ.
ಕಳೆದ 15–20 ದಿನಗಳಿಂದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ರೈತರ ಜಮೀನುಗಳಲ್ಲಿ ಕಾಡುಹಂದಿಗಳ ಹಾವಳಿ ಹೆಚ್ಚಾಗಿದೆ. ಹಗಲು-ರಾತ್ರಿ ಹೊಲ ಕಾಯುತ್ತಿದ್ದರೂ ಹಾವಳಿ ನಿಯಂತ್ರಣಕ್ಕೆ ಬರುತ್ತಿಲ್ಲ. ಕಷ್ಟಪಟ್ಟು ಬೆಳೆದ ಬೆಳೆ ಕಣ್ಣೆದುರೇ ನಾಶವಾಗುತ್ತಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈಗಾಗಲೇ ಬರಗಾಲದ ಹೊಡೆತದಿಂದ ತತ್ತರಿಸಿರುವ ರೈತರಿಗೆ ಕಾಡುಹಂದಿಗಳ ಹಾವಳಿ ಮತ್ತೊಂದು ಸಮಸ್ಯೆಯಾಗಿ ಪರಿಣಮಿಸಿದೆ. ಸಂಬಂಧಪಟ್ಟ ಅರಣ್ಯ ಇಲಾಖೆ ಹಾಗೂ ಅಧಿಕಾರಿಗಳು ಕಾಡುಹಂದಿಗಳ ಹಾವಳಿ ನಿಯಂತ್ರಣಕ್ಕೆ ಕ್ರಮ ಕೈಗೊಂಡು, ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.



