ಗದಗ: ಜೂಜಾಟ ಹಾಗೂ ಅಕ್ರಮ ಮದ್ಯ ಮಾರಾಟದಂತಹ ಸಮಾಜವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಗದಗ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಗಜೇಂದ್ರಗಡ ತಾಲೂಕಿನ ಇಟಗಿ ಗ್ರಾಮದ ನಿವಾಸಿ ಮಲ್ಲಪ್ಪ ಜಾಲಿಹಾಳ ಅವರ ಪುತ್ರ ಶಾಂತಪ್ಪ ಎಂಬಾತನನ್ನು ಗದಗ ಜಿಲ್ಲೆಯಿಂದ ಕೊಪ್ಪಳ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ. ಈತನ ನಿರಂತರ ಸಮಾಜವಿರೋಧಿ ಚಟುವಟಿಕೆಗಳಿಂದ ಬಡ ಹಾಗೂ ದುಡಿಯುವ ವರ್ಗದ ಜನರ ಆರ್ಥಿಕ ಪರಿಸ್ಥಿತಿಗೆ ಧಕ್ಕೆಯಾಗುವುದರ ಜತೆಗೆ ಯುವಜನರ ಮೇಲೂ ದುಷ್ಪರಿಣಾಮ ಬೀರುತ್ತಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಶಾಂತಪ್ಪ ವಿರುದ್ಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ 2015ರಿಂದ 2026ರವರೆಗೆ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ನಾಲ್ಕು ಪ್ರಕರಣಗಳು ಜೂಜಾಟಕ್ಕೆ ಸಂಬಂಧಿಸಿದ್ದು, ಅವುಗಳಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 78(3)ರಡಿ ಪ್ರಕರಣ ದಾಖಲಾಗಿ ಶಿಕ್ಷೆಯೂ ಆಗಿದೆ.
ಪ್ರಕರಣಗಳ ವಿವರ ಹೀಗಿವೆ: 91/2015, 14/2019, 77/2021 ಹಾಗೂ 62/2022. ಇದಲ್ಲದೆ, 2026ರಲ್ಲಿ ಪ್ರಕರಣ ಸಂಖ್ಯೆ 40/2026ರಡಿ ಕರ್ನಾಟಕ ಅಬಕಾರಿ ಕಾಯ್ದೆಯ ಕಲಂ 32(3) ಅಡಿಯಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದ ಪ್ರಕರಣವೂ ಶಾಂತಪ್ಪ ವಿರುದ್ಧ ದಾಖಲಾಗಿದೆ.
ಹಿಂದೆ ದಾಖಲಾಗಿದ್ದ ಪ್ರಕರಣಗಳು ಹಾಗೂ ಶಿಕ್ಷೆಯ ಹೊರತಾಗಿಯೂ ತನ್ನ ನಡವಳಿಕೆಯಲ್ಲಿ ಸುಧಾರಣೆ ಮಾಡಿಕೊಳ್ಳದೆ ಸಮಾಜವಿರೋಧಿ ಚಟುವಟಿಕೆಗಳನ್ನು ಮುಂದುವರಿಸಿದ್ದರಿಂದ ಆತನ ದುರ್ವರ್ತನೆಯನ್ನು ನಿಯಂತ್ರಿಸುವ ಉದ್ದೇಶದಿಂದ ಗಜೇಂದ್ರಗಡ ಪೊಲೀಸ್ ಠಾಣೆಯಿಂದ ಗಡಿಪಾರು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ಬಳಿಕ ಶಾಂತಪ್ಪನನ್ನು ಗದಗ ಜಿಲ್ಲೆಯಿಂದ ಕೊಪ್ಪಳ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಜೂಜಾಟ ಹಾಗೂ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಈ ಕ್ರಮ ಎಚ್ಚರಿಕೆಯಾಗಿದೆ. ಸಮಾಜವಿರೋಧಿ ಹಾಗೂ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.



