ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಇದೀಗ ಸ್ವಪಕ್ಷದ ಶಾಸಕರಿಂದಲೇ ವಿರೋಧ ವ್ಯಕ್ತವಾಗಿದೆ. ಮಂಡ್ಯದ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಸರ್ಕಾರದ ನಡೆ ಬಗ್ಗೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ರವಿಕುಮಾರ್ ಗಣಿಗ, ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. ರಾಜ್ಯದ ರೈತರಿಗೆ ಬೆಳೆಗಳಿಗೆ ನೀರು ಸಿಗದ ಪರಿಸ್ಥಿತಿ ನಿರ್ಮಾಣವಾದರೆ ಸಮಸ್ಯೆ ಮತ್ತಷ್ಟು ಗಂಭೀರವಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದೆ ರಾಜ್ಯದ ನೈಜ ಪರಿಸ್ಥಿತಿಯನ್ನು ಸರ್ಕಾರ ಸಮರ್ಥವಾಗಿ ಮಂಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ನೀರಿನ ಕೊರತೆ ಇದೆ ಎಂಬುದನ್ನು ಅಂಕಿ-ಅಂಶಗಳ ಸಮೇತ ಪ್ರಾಧಿಕಾರದ ಮುಂದೆ ಬಲವಾಗಿ ಪ್ರತಿಪಾದಿಸಬೇಕು ಎಂದಿದ್ದಾರೆ.
ಇದಕ್ಕಾಗಿ ತಜ್ಞರ ತಂಡವನ್ನು CWMA ಮುಂದೆ ಕಳುಹಿಸಬೇಕು ಎಂದು ಸಲಹೆ ನೀಡಿದ ಅವರು, ತಕ್ಷಣವೇ ವಿಧಾನಸಭೆ ಅಧಿವೇಶನ ಕರೆದು ರಾಜ್ಯದ ನೀರಿನ ಪರಿಸ್ಥಿತಿ ಬಗ್ಗೆ ಒಮ್ಮತದ ನಿರ್ಣಯ ಕೈಗೊಂಡು ಬಲವಾದ ವಾದ ಮಂಡಿಸಬೇಕು ಎಂದೂ ಸೂಚಿಸಿದ್ದಾರೆ.
ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ಈಗಾಗಲೇ ವಿರೋಧ ಪಕ್ಷಗಳು ಹಾಗೂ ರೈತ ಮುಖಂಡರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಆಡಳಿತ ಪಕ್ಷದ ಶಾಸಕರೇ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನ ಹೊರಹಾಕಿರುವುದು ಕಾವೇರಿ ಕಣಿವೆಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.



