ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಜಾತಿ, ಧರ್ಮ, ಭಾಷೆ ಹಾಗೂ ಪ್ರಾದೇಶಿಕತೆಯ ಹೆಸರಿನಲ್ಲಿ ಇರುವ ಭೇದಭಾವಗಳನ್ನು ತೊಲಗಿಸಿ, ಸಮಾಜದಲ್ಲಿ ಸದ್ಭಾವನೆ, ಸೌಹಾರ್ದತೆ ಹಾಗೂ ಶಾಂತಿಯನ್ನು ಬೆಳೆಸುವ ಮೂಲಕ ರಾಷ್ಟ್ರದ ಏಕತೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ ಹೇಳಿದರು.
ಪಟ್ಟಣದ ಪುರಸಭೆಯಲ್ಲಿ ಗುರುವಾರ ಸದ್ಭಾವನಾ ದಿನಾಚರಣೆ ಅಂಗವಾಗಿ ಸಿಬ್ಬಂದಿಯೊಂದಿಗೆ ಪ್ರತಿಜ್ಞಾ ವಿಧಿ ಸ್ವೀಕರಿಸಿ ಅವರು ಮಾತನಾಡಿದರು.
ಮಕ್ಕಳಿಗೆ ಶಾಲಾ ಹಂತದಿಂದಲೇ ಸಂವಿಧಾನದ ಆಶಯ, ರಾಷ್ಟ್ರೀಯ ಏಕತೆ ಹಾಗೂ ಸೌಹಾರ್ದತೆಯ ಮಹತ್ವವನ್ನು ತಿಳಿಸಿಕೊಟ್ಟರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ದೇಶದ ಏಕತೆ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಆಗಿದೆ. ವೈವಿಧ್ಯತೆಯಲ್ಲಿಯೇ ಭಾರತದ ಶಕ್ತಿ ಅಡಗಿದೆ. ಹೀಗಾಗಿ ಜಾತಿ, ಧರ್ಮ, ಭಾಷೆ ಅಥವಾ ಪ್ರದೇಶದ ಆಧಾರದ ಮೇಲೆ ಜನರನ್ನು ವಿಭಜಿಸುವ ಮನೋಭಾವಕ್ಕೆ ಅವಕಾಶ ನೀಡದೆ, ಪರಸ್ಪರ ಸಹಕಾರ ಹಾಗೂ ಸಹೋದರತ್ವದಿಂದ ಬದುಕಬೇಕು ಎಂದು ಹೇಳಿದರು.
ಸದ್ಭಾವನಾ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಪ್ರತಿದಿನದ ಬದುಕಿನಲ್ಲಿ ಸೌಹಾರ್ದತೆ, ಸಹಿಷ್ಣುತೆ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಸಂಕಲ್ಪವಾಗಬೇಕು ಎಂದು ಪರಶುರಾಮ ಗುಡದಾರಿ ಕರೆ ನೀಡಿದರು.
ಈ ಸಂದರ್ಭದಲ್ಲಿ ಹಿರಿಯ ಸಿಬ್ಬಂದಿ ಹನುಮಂತಪ್ಪ ನಂದೆಣ್ಣವರ ಅವರು ಸದ್ಭಾವನಾ ದಿನದ ಪ್ರತಿಜ್ಞಾ ವಿಧಿ ಬೋಧಿಸಿದರು. ಪುರಸಭೆ ವ್ಯವಸ್ಥಾಪಕಿ ಮಂಜುಳಾ ಹೂಗಾರ, ಆರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್, ಕಂದಾಯ ಅಧಿಕಾರಿ ಸುರೇಶ ಪೂಜಾರ, ಎಸ್.ಪಿ. ಲಿಂಬಯ್ಯನಮಠ, ನೇತ್ರಾ ಹೊಸಮನಿ, ಮಹೇಶ ಹೊಸಮನಿ, ಹೇಮರಾಜ ಅಣ್ಣಿಗೇರಿ, ಸಿದ್ದಪ್ಪ ಬಾಲೇಹೊಸೂರು, ಮಂಜುನಾಥ ಹೆಬ್ಬಾಳ, ಶೈಲಜಾ ಪಾಟೀಲ ಸೇರಿದಂತೆ ಪುರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.



