ಬೆಂಗಳೂರು: KPSC ನೇಮಕಾತಿ ಅಕ್ರಮದ ಬೆನ್ನಲ್ಲೇ ಐಎಎಸ್ ಅಧಿಕಾರಿಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.
ದೆಹಲಿಗೆ ತೆರಳಲು ಟಿಕೆಟ್ ಬುಕ್ ಮಾಡಿದ್ದ ಅವರು ವಿಮಾನ ನಿಲ್ದಾಣಕ್ಕೆ ತೆರಳಿದ ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಕುಟುಂಬದವರ ಸಂಪರ್ಕಕ್ಕೂ ಸಿಗುತ್ತಿಲ್ಲ. ಜಾರಿ ನಿರ್ದೇಶನಾಲಯ (ED) ದಾಳಿ ನಡೆದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ಅನುಮಾನಕ್ಕೆ ಕಾರಣವಾಗಿದೆ. ಅಧಿಕಾರಿ ವಿಮಾನ ನಿಲ್ದಾಣದಿಂದ ಎಲ್ಲಿಗೆ ತೆರಳಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದು, ವಿಮಾನ ನಿಲ್ದಾಣದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳು ಸೇರಿದಂತೆ ಲಭ್ಯವಿರುವ ಎಲ್ಲಾ ಮಾಹಿತಿಯನ್ನು ಪರಿಶೀಲಿಸಲಾಗುತ್ತಿದೆ.
ಇತ್ತೀಚೆಗೆ ಬೆಳಕಿಗೆ ಬಂದಿರುವ KPSC ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಈ ನಾಪತ್ತೆ ಪ್ರಕರಣ ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ಈ ಅಕ್ರಮದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದರು.
ಜ್ಞಾನೇಂದ್ರ ಕುಮಾರ್ ಅವರು ಹಿಂದೆ KPSCಯಲ್ಲಿ ಕಾರ್ಯನಿರ್ವಹಿಸಿದ್ದ ಅವಧಿಯಲ್ಲಿನ ಪಾತ್ರ ಸೇರಿದಂತೆ ಹಲವು ಅಂಶಗಳನ್ನು ತನಿಖಾ ಸಂಸ್ಥೆಗಳು ಪರಿಶೀಲಿಸುತ್ತಿವೆ ಎಂಬ ಮಾಹಿತಿ ಇದೆ. ED ದಾಳಿ ನಡೆದ ಮರುದಿನವೇ ಅವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಅಧಿಕಾರಿಯ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದು, ನಾಪತ್ತೆಯ ಹಿಂದಿನ ನಿಖರ ಕಾರಣ ತನಿಖೆಯಿಂದಷ್ಟೇ ಸ್ಪಷ್ಟವಾಗಬೇಕಿದೆ.



