ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಡ್ನಾಳ ಬಳಿ ನಡೆದಿದೆ.
ಕೂಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಬೊಲೆರೊದಲ್ಲಿದ್ದ ಭಾಗ್ಯಶ್ರೀ (35), ಸತ್ಯಮ್ಮ (30) ಹಾಗೂ ಹೊನ್ನಿಂಗಮ್ಮ (18) ಮೃತಪಟ್ಟಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಎಂಟು ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಘಟನೆ ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



