HomeEntertainmentಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಗೌರವ್ ಶೆಟ್ಟಿ ವಿಜಯಲಕ್ಷ್ಮಿ ದರ್ಶನ್ ಜೊತೆ ಪ್ರತ್ಯಕ್ಷ!

ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಗೌರವ್ ಶೆಟ್ಟಿ ವಿಜಯಲಕ್ಷ್ಮಿ ದರ್ಶನ್ ಜೊತೆ ಪ್ರತ್ಯಕ್ಷ!

For Dai;y Updates Join Our whatsapp Group

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದ ತನಿಖೆಯಲ್ಲಿ ಪೊಲೀಸರಿಗೆ ಬೇಕಾಗಿರುವ ಗೌರವ್ ಶೆಟ್ಟಿ, ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರ ಮಂಗಳೂರು ಭೇಟಿಯ ವೇಳೆ ಬಹಿರಂಗವಾಗಿ ಕಾಣಿಸಿಕೊಂಡಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ವಿಜಯಲಕ್ಷ್ಮಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಗೌರವ್ ಶೆಟ್ಟಿ ಸ್ವಾಗತಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರು ಪುನೀತ್, ಸುಹಾಸ್ ಹಾಗೂ ವೇಣು ಅವರನ್ನು ಬಂಧಿಸಿದ್ದರು. ಪ್ರಕರಣದ ತನಿಖೆ ಮುಂದುವರಿದ ಸಂದರ್ಭದಲ್ಲಿ ಗೌರವ್ ಶೆಟ್ಟಿ ಹಾಗೂ ಕಿರಣ್ ರೆಡ್ಡಿ ಅವರ ಮೇಲೂ ಪೊಲೀಸರಿಗೆ ಅನುಮಾನ ಮೂಡಿತ್ತು.

ಪೊಲೀಸರು ಇಬ್ಬರಿಗೂ ನೋಟಿಸ್ ನೀಡಲು ಪ್ರಯತ್ನಿಸಿದ್ದರೂ ಅವರು ಪೊಲೀಸರ ಸಂಪರ್ಕಕ್ಕೆ ಸಿಗದೆ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಪುನೀತ್ ಬಂಧನದ ಬಳಿಕ ಗೌರವ್ ಶೆಟ್ಟಿ ಹಾಗೂ ಕಿರಣ್ ರೆಡ್ಡಿ ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದರು ಎಂದು ತನಿಖಾ ಮೂಲಗಳು ತಿಳಿಸಿವೆ.

ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಬಂಧಿತ ಪುನೀತ್ ಜೊತೆ ಗೌರವ್ ಶೆಟ್ಟಿ ಮತ್ತು ಕಿರಣ್ ರೆಡ್ಡಿ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಬಹಿರಂಗವಾಗಿದೆ ಎನ್ನಲಾಗಿದೆ. ಇದೇ ಹಿನ್ನೆಲೆಯಲ್ಲಿ ಇಬ್ಬರ ವಿಚಾರಣೆಗೆ ಪೊಲೀಸರು ಮುಂದಾಗಿದ್ದರು.

ಈ ನಡುವೆ ವಿಜಯಲಕ್ಷ್ಮಿ ದರ್ಶನ್ ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದು, ವಿಮಾನ ನಿಲ್ದಾಣದಲ್ಲಿ ಅವರನ್ನು ಹಾಗೂ ಅವರ ಗೆಳತಿಯನ್ನು ಗೌರವ್ ಶೆಟ್ಟಿ ಸ್ವಾಗತಿಸಿರುವುದು ಕಂಡುಬಂದಿದೆ. ವಿಜಯಲಕ್ಷ್ಮಿ ಬಳಿಕ ಶ್ರೀ ಮಂದಾರ ಧರ್ಮ ಚಾವಡಿಗೆ ತೆರಳಿದ ಸಂದರ್ಭದಲ್ಲೂ ಗೌರವ್ ಶೆಟ್ಟಿ ಜೊತೆಗಿದ್ದರು ಎನ್ನಲಾಗಿದೆ.

ವಿಜಯಲಕ್ಷ್ಮಿ ಅವರ ಮಂಗಳೂರು ಭೇಟಿಯ ವೇಳೆ ಗೌರವ್ ಶೆಟ್ಟಿ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಪೊಲೀಸರ ವಿಚಾರಣೆಗೆ ಸಿಗದೆ ತಲೆಮರೆಸಿಕೊಂಡಿರುವ ಆರೋಪಿಯೊಬ್ಬರು ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳ ಮುಂದಿನ ಕ್ರಮದ ಬಗ್ಗೆ ಕುತೂಹಲ ಮೂಡಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img