ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಬಿಸಿಲೆ ಘಾಟ್ ಪ್ರದೇಶದಲ್ಲಿ ಭಾರೀ ಗಾಳಿ-ಮಳೆಯಿಂದ ಮರಗಳು ಧರೆಗುರುಳಿವೆ. ಪರಿಣಾಮ ಬಿಸಿಲೆ-ಸುಬ್ರಹ್ಮಣ್ಯ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿದೆ.
ಬಿಸಿಲೆ ಘಾಟ್ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಮರ ಬಿದ್ದ ಹಿನ್ನೆಲೆಯಲ್ಲಿ ಸಾರಿಗೆ ಬಸ್‌ಗಳು ಸೇರಿದಂತೆ ನೂರಾರು ವಾಹನಗಳು ರಸ್ತೆಯಲ್ಲೇ ಸಿಲುಕಿಕೊಂಡಿವೆ.
ಮಧ್ಯಾಹ್ನದಿಂದಲೇ ವಾಹನಗಳು ಹಾಗೂ ಸಾರಿಗೆ ಬಸ್‌ಗಳು ಮುಂದೆ ಸಾಗಲಾಗದೆ ನಿಂತಲ್ಲೇ ನಿಂತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ದಾರಿ ಮಧ್ಯೆ ಸಿಲುಕಿದ ಪ್ರವಾಸಿಗರು ಹಾಗೂ ಪ್ರಯಾಣಿಕರು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ರಸ್ತೆಗೆ ಬಿದ್ದಿರುವ ಮರಗಳನ್ನು ತೆರವುಗೊಳಿಸುವ ಕಾರ್ಯ ವಿಳಂಬವಾಗುತ್ತಿರುವುದಕ್ಕೆ ಪ್ರಯಾಣಿಕರು ಹಾಗೂ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣ ಮರಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಅವರು ಆಗ್ರಹಿಸಿದ್ದಾರೆ.
ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ಘಾಟ್ ಪ್ರದೇಶಗಳಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.



