ಬೆಂಗಳೂರು: ನ್ಯಾಯಾಲಯದ ಅನುಮತಿಯಿಲ್ಲದೆ ಬಿಡದಿ ಟೌನ್‌ಶಿಪ್ ಯೋಜನಾ ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾಮಗಾರಿ ನಡೆಸುವಂತಿಲ್ಲ ಹಾಗೂ ಒಂದೇ ಒಂದು ಮರವನ್ನೂ ಕಡಿಯಬಾರದು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಬಿಡದಿ ಸ್ಮಾರ್ಟ್ ಸಿಟಿ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಶ್ನಿಸಿ ನಾಲ್ವರು ರೈತರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ಪೀಠದಲ್ಲಿ ನಡೆಯಿತು.
ವಿಚಾರಣೆ ವೇಳೆ ಸರ್ಕಾರದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಪರಿಹಾರ ಮೊತ್ತ ನಿಗದಿಪಡಿಸಿದ ತಕ್ಷಣವೇ ಬುಲ್ಡೋಜರ್ ತೆಗೆದುಕೊಂಡು ಹೋಗಿ ಆಸ್ತಿ ನಾಶಪಡಿಸುವಂತಿಲ್ಲ ಎಂದು ಎಚ್ಚರಿಕೆ ನೀಡಿತು. ರಾತ್ರೋರಾತ್ರಿ ರೈತರ ಆಸ್ತಿಯನ್ನು ನಾಶಪಡಿಸುವ ಯಾವುದೇ ಕ್ರಮಕ್ಕೆ ಸರ್ಕಾರ ಮುಂದಾಗಬಾರದು ಎಂದು ಸೂಚಿಸಿತು.
ಪರಿಹಾರ ಮೊತ್ತ ಪ್ರಕಟವಾದರೂ ಹೈಕೋರ್ಟ್ ಅನುಮತಿ ಪಡೆಯದೆ ರೈತರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಇದೇ ವೇಳೆ, ಹೆಚ್ಚಿನ ರೈತರು ಭೂಮಿ ನೀಡಲು ಸ್ವಯಂಪ್ರೇರಿತರಾಗಿ ಮುಂದೆ ಬಂದಿದ್ದಾರೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇದಕ್ಕೆ ಸಂಬಂಧಿಸಿದ ಯಾವುದೇ ಅಧಿಕೃತ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ ಎಂದು ರೈತರ ಪರ ವಕೀಲರು ವಾದಿಸಿದರು. ವಾಸ್ತವದಲ್ಲಿ ಶೇ.5ರಷ್ಟು ರೈತರೂ ಭೂಮಿ ನೀಡಲು ಒಪ್ಪಿಲ್ಲ ಎಂದು ಅವರು ತಿಳಿಸಿದರು.
ಗ್ರೇಟರ್ ಬೆಂಗಳೂರು ಡೆವಲಪ್‌ಮೆಂಟ್ ಅಥಾರಿಟಿ (GBDA) ಪರ ವಕೀಲ ಶಿವಪ್ರಕಾಶ್ ಶಾಂತನಗೌಡರ್ ವಾದ ಮಂಡಿಸಿ, ರೈತರನ್ನು ಬಲವಂತವಾಗಿ ಒಕ್ಕಲೆಬ್ಬಿಸುವುದಿಲ್ಲ. ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಅಡ್ವೊಕೇಟ್ ಜನರಲ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಭೂಸ್ವಾಧೀನ ಪ್ರಕ್ರಿಯೆ ಇನ್ನೂ ಆರಂಭಿಕ ಹಂತದಲ್ಲಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ಪರಿಹಾರ ಮೊತ್ತವನ್ನು ಅಂತಿಮವಾಗಿ ನಿಗದಿಪಡಿಸುವವರೆಗೆ ಯಾವುದೇ ರೈತರನ್ನು ತೆರವುಗೊಳಿಸುವುದಿಲ್ಲ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು. ಪರಿಹಾರದ ವಿವರಗಳನ್ನು ಮೊದಲು ಹೈಕೋರ್ಟ್ ಮುಂದೆ ಮಂಡಿಸಿ, ನ್ಯಾಯಾಲಯದ ಗಮನಕ್ಕೆ ತಂದ ಬಳಿಕವೇ ಮುಂದಿನ ಪ್ರಕ್ರಿಯೆ ಮುಂದುವರಿಸಲಾಗುವುದು ಎಂದು ತಿಳಿಸಿದರು.
ಸರ್ಕಾರದ ಪರ ಎಜಿ ನೀಡಿದ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಾಲಯ, ರಾತ್ರೋರಾತ್ರಿ ಪರಿಹಾರ ನಿಗದಿಪಡಿಸಿ ಮರ ಕಡಿಯುವಂತಹ ಯಾವುದೇ ಕ್ರಮ ನಡೆಯುವುದಿಲ್ಲ. ಹೀಗಾಗಿ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತು.
ಮುಖ್ಯ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 29ಕ್ಕೆ ಮುಂದೂಡಲಾಗಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದ ಹೊಸ ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ನಿಗದಿಪಡಿಸಲಾಗಿದೆ.



