ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರಮುಖ ವಾಣಿಜ್ಯ ಪ್ರದೇಶವಾದ ಅವೆನ್ಯೂ ರಸ್ತೆಯಲ್ಲಿ ಪಾದಚಾರಿ ಮಾರ್ಗಗಳ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಲಾಗಿದೆ.
ಬೆಂಗಳೂರು ಸೆಂಟ್ರಲ್ ಸಿಟಿ ಕಾರ್ಪೊರೇಷನ್ ವತಿಯಿಂದ ನಡೆದ ಕಾರ್ಯಾಚರಣೆಯಲ್ಲಿ ಪಾದಚಾರಿಗಳ ಸಂಚಾರಕ್ಕೆ ಅಡ್ಡಿಯಾಗಿದ್ದ ಅನಧಿಕೃತ ಅಂಗಡಿಗಳು, ತಾತ್ಕಾಲಿಕ ಶೆಡ್‌ಗಳು, ಜಾಹೀರಾತು ಫಲಕಗಳು ಹಾಗೂ ರಸ್ತೆ ಬದಿಯ ವಿವಿಧ ಅಡೆತಡೆಗಳನ್ನು ತೆರವುಗೊಳಿಸಲಾಯಿತು.
ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್‌ಗಳು ಒತ್ತುವರಿಯಾಗಿದ್ದರಿಂದ ಪಾದಚಾರಿಗಳು ಮುಖ್ಯ ರಸ್ತೆಯಲ್ಲೇ ಸಂಚರಿಸುವಂತಾಗಿತ್ತು. ಇದರಿಂದ ಅಪಘಾತದ ಆತಂಕ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಪಾದಚಾರಿಗಳ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಪಾಲಿಕೆ ಅಧಿಕಾರಿಗಳು ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.
ಕಾರ್ಯಾಚರಣೆ ವೇಳೆ ಫುಟ್‌ಪಾತ್ ಒತ್ತುವರಿ ಮಾಡಿಕೊಂಡಿದ್ದ ಅಂಗಡಿಕಾರರ ಅನಧಿಕೃತ ವಸ್ತುಗಳನ್ನು ತೆರವುಗೊಳಿಸಿ, ಪಾದಚಾರಿಗಳಿಗೆ ಮುಕ್ತವಾಗಿ ಸಂಚರಿಸಲು ಮಾರ್ಗ ಕಲ್ಪಿಸಲಾಯಿತು.
ಮುಂದಿನ ದಿನಗಳಲ್ಲಿ ಮತ್ತೆ ಫುಟ್‌ಪಾತ್ ಅತಿಕ್ರಮಣ ಮಾಡಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದರ ಜೊತೆಗೆ ದಂಡ ವಿಧಿಸಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.



