ರಾಯಚೂರು: ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಇಂದಿನಿಂದ ಚಾಲನೆ ದೊರೆಯಲಿದೆ.
ಸಂಜೆ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಧ್ವಜಾರೋಹಣ ನೆರವೇರಿಸುವ ಮೂಲಕ ಸಪ್ತರಾತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಸಪ್ತರಾತ್ರೋತ್ಸವವು ಆ.27ರಿಂದ ಸೆ.2ರವರೆಗೆ ಏಳು ದಿನಗಳ ಕಾಲ ನಡೆಯಲಿದೆ. ಉತ್ಸವದ ಅಂಗವಾಗಿ ಗೋ, ಗಜ, ಅಶ್ವ, ಧಾನ್ಯ ಹಾಗೂ ಲಕ್ಷ್ಮಿ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಆ.29ರಂದು ಪೂರ್ವಾರಾಧನೆ, ಆ.30ರಂದು ಮಧ್ಯಾರಾಧನೆ ಹಾಗೂ ಆ.31ರಂದು ಉತ್ತರಾರಾಧನೆ ನಡೆಯಲಿದೆ. ಆರಾಧನಾ ಮಹೋತ್ಸವದ ಅಂಗವಾಗಿ ಮಠದ ಆವರಣದಲ್ಲಿರುವ ಪರಿಮಳ ತೀರ್ಥ ಪುಷ್ಕರಣಿಯಲ್ಲಿ ಮೂರು ದಿನಗಳ ಕಾಲ ತೆಪ್ಪೋತ್ಸವವೂ ಜರುಗಲಿದೆ.
ಆ.29ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ‘ರಾಘವೇಂದ್ರ ಗುರು ಅನುಗ್ರಹ ಪ್ರಶಸ್ತಿ’ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಆ.31ರಂದು ಅದ್ಧೂರಿಯಾಗಿ ಮಹಾರಥೋತ್ಸವ ನಡೆಯಲಿದ್ದು, ಈ ಸಂದರ್ಭದಲ್ಲಿ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಸುರಿಸಲಾಗುವುದು.
ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂತ್ರಾಲಯಕ್ಕೆ ದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಮಠದ ವತಿಯಿಂದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.



