ಯಾದಗಿರಿ: ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು ಘಟನೆ ನಡೆದ ಸುಮಾರು 9 ತಿಂಗಳ ಬಳಿಕ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.
ಯಾದಗಿರಿ ಡಿಡಿಪಿಐ ಚನ್ನಬಸಪ್ಪ ಮುದೋಳ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ. ಅಮಾನತುಗೊಂಡ ಶಿಕ್ಷಕರನ್ನು ಹುಣಸಗಿ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ಗುರುರಾಜ್ ಜೋಶಿ ಹಾಗೂ ಹುಣಸಗಿ ತಾಲೂಕಿನ ಕುಪ್ಪಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾಸಾಹೇಬ್ ದೇಶಮುಖ ಎಂದು ತಿಳಿದುಬಂದಿದೆ.
ಆರ್ಎಸ್ಎಸ್ ತನ್ನ ಶತಮಾನೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಕಳೆದ ನವೆಂಬರ್ನಲ್ಲಿ ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದಲ್ಲಿ ಪಥಸಂಚಲನ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಹುಣಸಗಿ ತಾಲೂಕಿನ ಇಬ್ಬರು ಶಿಕ್ಷಕರು ಭಾಗವಹಿಸಿದ್ದರು ಎನ್ನಲಾಗಿದೆ.
ಸರ್ಕಾರಿ ಸೇವೆಯಲ್ಲಿದ್ದುಕೊಂಡು ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಾರೆ ಎಂದು ಆರೋಪಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಮುಖಂಡರು ಶಿಕ್ಷಣ ಇಲಾಖೆಗೆ ದೂರು ಸಲ್ಲಿಸಿದ್ದರು. ಈ ಕುರಿತು ಆಗಿನ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ದೂರು ನೀಡಲಾಗಿತ್ತು.
ದೂರಿನ ಆಧಾರದ ಮೇಲೆ ಪ್ರಿಯಾಂಕ್ ಖರ್ಗೆ ಅವರು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದರು. ಬಳಿಕ ಶಿಕ್ಷಣ ಇಲಾಖೆ ತನಿಖೆ ನಡೆಸಿದ್ದು, ಇದೀಗ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ.



