ಚಾಮರಾಜನಗರ: ಡೆತ್‌ನೋಟ್ ಬರೆದಿಟ್ಟು ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಾಮರಾಜನಗರ ತಾಲೂಕಿನ ಬೆಂಡರವಾಡಿ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಗುರುಮೂರ್ತಿ ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೂ ಮುನ್ನ ಗುರುಮೂರ್ತಿ ಡೆತ್‌ನೋಟ್ ಬರೆದಿಟ್ಟಿದ್ದು, ನಾಲ್ವರು ಬಂದು ಗಲಾಟೆ ನಡೆಸಿ ಅವಮಾನಿಸಿದ್ದೇ ತನ್ನ ಸಾವಿಗೆ ಕಾರಣ ಎಂದು ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅಗ್ನಿಶಾಮಕ ಸಿಬ್ಬಂದಿ ಕೆರೆಯಲ್ಲಿ ಶೋಧ ಕಾರ್ಯ ನಡೆಸಿ ಗುರುಮೂರ್ತಿಯ ಮೃತದೇಹವನ್ನು ಹೊರತೆಗೆದಿದ್ದಾರೆ.
ಈ ಸಂಬಂಧ ಮೃತನ ಕುಟುಂಬಸ್ಥರು ಶ್ರವಣ ಹಾಗೂ ಅಭಿ ಸೇರಿದಂತೆ ಕೆಲವರ ವಿರುದ್ಧ ದೂರು ನೀಡಿದ್ದಾರೆ. ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



