ಬೆಂಗಳೂರು: ಆರ್‌ಎಸ್‌ಎಸ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ವಿಚಾರಣೆ ನಡೆಸಿದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಇಬ್ಬರಿಗೂ ತಲಾ 10 ಸಾವಿರ ರೂ. ವೈಯಕ್ತಿಕ ಶ್ಯೂರಿಟಿ ನೀಡುವ ಷರತ್ತಿನ ಮೇಲೆ ಜಾಮೀನು ಮಂಜೂರು ಮಾಡಿದೆ.
ತೇಜಸ್ ಗೌಡ ಎಂಬುವರು ಸಲ್ಲಿಸಿದ್ದ ಖಾಸಗಿ ದೂರಿನ ಮೇರೆಗೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್‌ಗೆ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು. ಕಳೆದ ವಿಚಾರಣೆ ವೇಳೆ ಇಬ್ಬರೂ ನಾಯಕರು ಖುದ್ದು ಹಾಜರಾತಿಯಿಂದ ವಿನಾಯಿತಿ ಪಡೆದುಕೊಂಡಿದ್ದರು. ಆದರೆ ಈ ಬಾರಿ ಖುದ್ದು ಹಾಜರಾಗುವಂತೆ ಕೋರ್ಟ್ ಸೂಚಿಸಿತ್ತು.
ಇದಕ್ಕೆ ಬದಲಾಗಿ ಸದಾಶಿವನಗರ ಮತ್ತು ಅಶೋಕ ನಗರ ಪೊಲೀಸರು ಖುದ್ದು ಹಾಜರಾಗಿ ವರದಿ ಸಲ್ಲಿಸಿದ್ದರು. ಆದರೆ ಈ ವರದಿ ತೃಪ್ತಿಕರವಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಾಧೀಶರು, ಇಬ್ಬರೂ ನಾಯಕರು ಖುದ್ದು ಹಾಜರಾಗುವಂತೆ ಸೂಚಿಸಿ ಮತ್ತೆ ಸಮನ್ಸ್ ಜಾರಿ ಮಾಡಿದ್ದರು.

