ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ವಿ. ವೆಂಕಟೇಶ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯ ಮಳೆ ಪ್ರಮಾಣ, ಬರ ಪರಿಸ್ಥಿತಿ, ಬೆಳೆ ಸ್ಥಿತಿ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಸಮಗ್ರ ಮಾಹಿತಿ ಪಡೆದು ಅವರು ಮಾತನಾಡಿದರು.
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಳೆ ಕೊರತೆ ಕಂಡುಬಂದಿದ್ದು, ವಿಶೇಷವಾಗಿ ಗಜೇಂದ್ರಗಡ ತಾಲೂಕಿನಲ್ಲಿ ವಾಡಿಕೆಗಿಂತ ಶೇ.45ರಷ್ಟು ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ತಾಲೂಕನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ತಿಳಿಸಲಾಯಿತು. ಈ ಹಿನ್ನೆಲೆಯಲ್ಲಿ ಬರ ನಿರ್ವಹಣಾ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಡಾ. ವೆಂಕಟೇಶ ಸೂಚಿಸಿದರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ನಿರಂತರ ನಿಗಾ ವಹಿಸಬೇಕು. ಯಾವುದೇ ಪ್ರದೇಶದಲ್ಲಿ ನೀರಿನ ಸಮಸ್ಯೆ ಕಂಡುಬಂದ ತಕ್ಷಣ ಪರ್ಯಾಯ ವ್ಯವಸ್ಥೆ ಮೂಲಕ ಸಮರ್ಪಕ ನೀರು ಪೂರೈಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಜಾನುವಾರುಗಳಿಗೆ ಸುಮಾರು 37 ವಾರಗಳಿಗೆ ಸಾಕಾಗುವಷ್ಟು ಮೇವಿನ ಲಭ್ಯತೆ ಇರುವ ಕುರಿತು ಮಾಹಿತಿ ಪಡೆದ ಅವರು, ಮುಂದಿನ ದಿನಗಳಲ್ಲಿಯೂ ಮೇವಿನ ಕೊರತೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಬರ ನಿರ್ವಹಣಾ ಕಾರ್ಯಗಳಿಗೆ ವಿಬಿಜಿ ರಾಮ್‌ಜಿ ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ ಅಗತ್ಯ ಕಾಮಗಾರಿಗಳನ್ನು ಗುರುತಿಸಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆಯೂ ಪರಿಶೀಲನೆ ನಡೆಸಲಾಯಿತು. ಶಕ್ತಿ ಯೋಜನೆಯಡಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಹೇಳಿದರು.
ಅಂಗನವಾಡಿ ಕಟ್ಟಡಗಳ ಸ್ಥಿತಿಗತಿ ಕುರಿತು ಮಾಹಿತಿ ಪಡೆದ ಡಾ. ವೆಂಕಟೇಶ, ಅಗತ್ಯವಿರುವ ಕಟ್ಟಡಗಳನ್ನು ಹೊಸ ಉದ್ಯೋಗ ಖಾತ್ರಿ ಯೋಜನೆಯಡಿ ಅಭಿವೃದ್ಧಿಪಡಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಶಾಲೆಗಳು ಹಾಗೂ ವಿವಿಧ ವಸತಿ ನಿಲಯಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದ ಅವರು, ಮಕ್ಕಳಿಗೆ ಗುಣಮಟ್ಟದ ಆಹಾರ ಮತ್ತು ಉತ್ತಮ ಶಿಕ್ಷಣ ದೊರೆಯುವಂತೆ ಸಂಬಂಧಿಸಿದ ಅಧಿಕಾರಿಗಳು ಖಾತರಿಪಡಿಸಬೇಕು ಎಂದರು.
ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ ಪರಿಹಾರ ಒದಗಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮಗಳನ್ನು ದೊಡ್ಡ ಮಟ್ಟದಲ್ಲಿ ಆಯೋಜಿಸಬೇಕು ಎಂದು ಅವರು ಸೂಚಿಸಿದರು. ಸ್ಥಳೀಯ ಜನಪ್ರತಿನಿಧಿಗಳನ್ನು ಕಾರ್ಯಕ್ರಮಗಳಿಗೆ ಆಹ್ವಾನಿಸಿ ಸಾರ್ವಜನಿಕರ ಅಹವಾಲುಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸಬೇಕು ಎಂದರು.
ಸರ್ಕಾರದ ‘ಪ್ರಜಾಸೇವೆ’ ನೂತನ ಮಾರ್ಗಸೂಚಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಜೂನ್ 1ರಿಂದ ಆಗಸ್ಟ್ 28ರವರೆಗೆ ಗದಗ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.34ರಷ್ಟು ಮಳೆ ಕೊರತೆ ದಾಖಲಾಗಿದೆ. ಈ ಅವಧಿಯಲ್ಲಿ ವಾಡಿಕೆಯಂತೆ 229.3 ಮಿ.ಮೀ. ಮಳೆಯಾಗಬೇಕಾಗಿದ್ದರೆ, ಕೇವಲ 152.2 ಮಿ.ಮೀ. ಮಳೆ ದಾಖಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ತಾಲೂಕುವಾರು ಗಮನಿಸಿದರೆ ಗದಗ ಹಾಗೂ ಗಜೇಂದ್ರಗಡ ತಾಲೂಕುಗಳಲ್ಲಿ ತಲಾ ಶೇ.46ರಷ್ಟು ಮಳೆ ಕೊರತೆ ದಾಖಲಾಗಿದೆ. ರೋಣ ಮತ್ತು ಮುಂಡರಗಿಯಲ್ಲಿ ತಲಾ ಶೇ.39, ಶಿರಹಟ್ಟಿಯಲ್ಲಿ ಶೇ.31 ಹಾಗೂ ಲಕ್ಷ್ಮೇಶ್ವರದಲ್ಲಿ ಶೇ.20ರಷ್ಟು ಮಳೆ ಕೊರತೆಯಾಗಿದೆ. ನರಗುಂದ ತಾಲೂಕಿನಲ್ಲಿ ಮಾತ್ರ ಶೇ.10ರಷ್ಟು ಅಧಿಕ ಮಳೆ ದಾಖಲಾಗಿದೆ.
ಆಗಸ್ಟ್ 1ರಿಂದ 28ರವರೆಗಿನ ಅವಧಿಯಲ್ಲಿಯೂ ಜಿಲ್ಲೆಯಲ್ಲಿ ವಾಡಿಕೆಯ 73.1 ಮಿ.ಮೀ. ಮಳೆಗೆ ಕೇವಲ 44.6 ಮಿ.ಮೀ. ಮಳೆ ದಾಖಲಾಗಿದ್ದು, ಶೇ.39ರಷ್ಟು ಕೊರತೆ ಕಂಡುಬಂದಿದೆ.
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ನೀಡಿರುವ ಎಲ್ಲ ನಿರ್ದೇಶನಗಳನ್ನು ಅಧಿಕಾರಿಗಳು ಚಾಚೂ ತಪ್ಪದೆ ಪಾಲಿಸಬೇಕು ಎಂದು ಸೂಚಿಸಿದರು. ಜಿಲ್ಲೆಯ ಅಭಿವೃದ್ಧಿ ಹಾಗೂ ಸಾರ್ವಜನಿಕ ಸೇವೆಗೆ ಸಂಬಂಧಿಸಿದ ಕಾರ್ಯಗಳಲ್ಲಿ ಉತ್ತಮ ಪ್ರಗತಿ ಸಾಧಿಸುವಂತೆ ಹಾಗೂ ವಿಶೇಷವಾಗಿ ಕಂದಾಯ ಇಲಾಖೆಯ ಬಾಕಿ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯಿತಿ ಡಿಎಸ್‌ಸಿ ಆರ್. ಮುಂಡರಗಿ, ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು.
ಬರ ನಿರ್ವಹಣೆಯಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು. ಪ್ರತಿಯೊಂದು ಪ್ರದೇಶದ ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಗಮನಿಸಿ, ಸಮಸ್ಯೆ ಕಂಡುಬಂದ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು.
ಡಾ. ಎಂ.ವಿ. ವೆಂಕಟೇಶ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ



