HomeGadag Newsಬರ ಘೋಷಣೆಯಲ್ಲಿ ತಾರತಮ್ಯ ಆರೋಪ: ರೈತರ ಆಕ್ರೋಶ

ಬರ ಘೋಷಣೆಯಲ್ಲಿ ತಾರತಮ್ಯ ಆರೋಪ: ರೈತರ ಆಕ್ರೋಶ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮುಂಗಾರು ಮಳೆಯ ಕೊರತೆ ಹಾಗೂ ಬೆಳೆ ನಷ್ಟದಿಂದ ಗದಗ ಜಿಲ್ಲೆಯ ಹಲವು ತಾಲೂಕುಗಳ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ, ಸರ್ಕಾರ ಕೇವಲ ಗಜೇಂದ್ರಗಡ ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಿರುವ ಕ್ರಮ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯ ಇತರ ತಾಲೂಕುಗಳಲ್ಲಿಯೂ ಬೆಳೆಗಳು ಒಣಗುತ್ತಿದ್ದು, ವಾಸ್ತವ ಪರಿಸ್ಥಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ಬರಪೀಡಿತ ತಾಲೂಕುಗಳ ಪಟ್ಟಿಯನ್ನು ವಿಸ್ತರಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

ವಿಶೇಷವಾಗಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಮುಂಡರಗಿ ತಾಲೂಕುಗಳಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹತ್ತಿ, ಮೆಕ್ಕೆಜೋಳ, ಶೇಂಗಾ, ಉಳ್ಳಾಗಡ್ಡಿ ಹಾಗೂ ಮೆಣಸಿನಕಾಯಿ ಸೇರಿದಂತೆ ವಿವಿಧ ಮುಂಗಾರು ಬೆಳೆಗಳು ಒಣಗುತ್ತಿದ್ದು, ಬಿತ್ತನೆಗೆ ಮಾಡಿದ ವೆಚ್ಚವೂ ಮರಳದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮತ್ತೊಮ್ಮೆ ಪಾರದರ್ಶಕ ಬೆಳೆ ನಷ್ಟ ಸಮೀಕ್ಷೆ ನಡೆಸಿ, ನಿಜವಾದ ಬರ ಪರಿಸ್ಥಿತಿಯನ್ನು ಸರ್ಕಾರಕ್ಕೆ ವರದಿ ಮಾಡಬೇಕು. ಅರ್ಹ ರೈತರಿಗೆ ಬರ ಪರಿಹಾರ, ಬೆಳೆ ವಿಮೆ ಹಾಗೂ ಮಧ್ಯಂತರ ವಿಮೆ ಸೌಲಭ್ಯವನ್ನು ಒದಗಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಈ ಕುರಿತು ಲಕ್ಷ್ಮೇಶ್ವರ ಹಾಗೂ ಸುತ್ತಮುತ್ತಲಿನ ಭಾಗದ ಮೂವರು ರೈತರು ತಮ್ಮ ಪ್ರತಿಕ್ರಿಯೆ ನೀಡಿದ್ದು, ಸರ್ಕಾರದ ಬರ ಘೋಷಣೆ ಕ್ರಮವನ್ನು ಪ್ರಶ್ನಿಸಿದ್ದಾರೆ.

ಮುಂಗಾರು ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಜಿಲ್ಲೆಯ ರೈತರೆಲ್ಲರೂ ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೇವಲ ಗಜೇಂದ್ರಗಡ ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಿರುವುದು ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಹಚ್ಚಿದಂತಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಮತ್ತೊಮ್ಮೆ ಪಾರದರ್ಶಕ ಬೆಳೆ ನಷ್ಟ ಸಮೀಕ್ಷೆ ನಡೆಸಿ, ಅರ್ಹ ರೈತರಿಗೆ ಪರಿಹಾರ ಹಾಗೂ ವಿಮಾ ಸೌಲಭ್ಯ ಒದಗಿಸಬೇಕು. ಈ ನಿಟ್ಟಿನಲ್ಲಿ ಪಕ್ಷಾತೀತವಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾಳಜಿ ವಹಿಸಬೇಕು. ರೈತರು ತಮ್ಮ ನ್ಯಾಯಯುತ ಬೇಡಿಕೆಗಳನ್ನೂ ಹೋರಾಟದ ಮೂಲಕವೇ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಬಾರದು. 

ವಿರೂಪಾಕ್ಷಪ್ಪ ಆದಿ, ರೈತ, ಲಕ್ಷ್ಮೇಶ್ವರ

ಶಿರಹಟ್ಟಿ ಮತಕ್ಷೇತ್ರದ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಮುಂಡರಗಿ ತಾಲೂಕುಗಳಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದೆ. ರೈತರು ಬಿತ್ತನೆಗೆ ಮಾಡಿದ ಖರ್ಚನ್ನೂ ವಾಪಸ್ ಪಡೆಯಲಾಗದೆ ಸಂಕಷ್ಟದಲ್ಲಿದ್ದಾರೆ. ಹತ್ತಿ, ಮೆಕ್ಕೆಜೋಳ, ಶೇಂಗಾ, ಉಳ್ಳಾಗಡ್ಡಿ ಹಾಗೂ ಮೆಣಸಿನಕಾಯಿ ಬೆಳೆಗಳು ಒಣಗಿ ನಿಂತಿವೆ. ಬರದ ಪರಿಸ್ಥಿತಿ ಕಣ್ಣಿಗೆ ಕಾಣುತ್ತಿದ್ದರೂ, ಈ ಮೂರು ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವುದು ಖಂಡನೀಯ. ಕೂಡಲೇ ಎರಡನೇ ಹಂತದಲ್ಲಿ ಈ ಮೂರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ, ರೈತರಿಗೆ ಸೂಕ್ತ ಪರಿಹಾರ ಹಾಗೂ ಮಧ್ಯಂತರ ವಿಮೆ ನೀಡಬೇಕು. ಇಲ್ಲವಾದರೆ ಸರ್ಕಾರ ರೈತರ ಕೋಪಕ್ಕೆ ಗುರಿಯಾಗಬೇಕಾಗುತ್ತದೆ.

ಚನ್ನಪ್ಪ ಷಣ್ಮುಕಿ, ರೈತ, ಗೊಜನೂರು

ಮಳೆ ಕೊರತೆಯ ಜತೆಗೆ ತೀವ್ರ ಬಿಸಿಲಿನ ವಾತಾವರಣದಿಂದ ಲಕ್ಷ್ಮೇಶ್ವರ ತಾಲೂಕಿನಲ್ಲಿ ಮುಂಗಾರು ಬೆಳೆಗಳು ಒಣಗಿ ನಿಂತಿವೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳು ಮತ್ತೊಮ್ಮೆ ತಾಲೂಕಿನಲ್ಲಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ಬೆಳೆಗಳು ಹಾಳಾಗಿರುವುದರಿಂದ ರೈತರು ಬೀಜ, ಗೊಬ್ಬರ ಹಾಗೂ ಕ್ರಿಮಿನಾಶಕಕ್ಕಾಗಿ ಮಾಡಿದ ಸಾಲವನ್ನು ಮರುಪಾವತಿಸಲು ಸಾಧ್ಯವಾಗದೆ, ಬಡ್ಡಿ ಕಟ್ಟಲೂ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ಸರ್ಕಾರ ರೈತರ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಲಕ್ಷ್ಮೇಶ್ವರ ತಾಲೂಕನ್ನು ಬರಪೀಡಿತ ಎಂದು ಘೋಷಿಸಬೇಕು. ಬರಗಾಲ ಘೋಷಣೆಯ ಮಾನದಂಡದಂತೆ ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು.

ಬಸವರಾಜ ಇಟಗಿ, ರೈತ, ಸೂರಣಗಿ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img