ದಾವಣಗೆರೆ: ಗುಟ್ಕಾ ನಿಷೇಧ ಹಾಗೂ ಭದ್ರ ಮೇಲ್ದಂಡೆ ನೀರು ಬಿಡುಗಡೆ ಆದೇಶ ವಿರೋಧಿಸಿ ಬಿಜೆಪಿ ರೈತ ಮೋರ್ಚಾ ಕರೆ ನೀಡಿದ್ದ ಪ್ರತಿಭಟನೆ ದಾವಣಗೆರೆಯಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೇಣುಕಾಚಾರ್ಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅಡಿಕೆ ಬೆಳೆಗಾರರು ನಗರದ ಪ್ರಮುಖ ಭಾಗಗಳಲ್ಲಿ ಬೈಕ್ ರ್ಯಾಲಿ ನಡೆಸಿದರು. ಅರುಣ ಸರ್ಕಲ್, ವಿದ್ಯಾರ್ಥಿ ಭವನ ಮತ್ತು ರೇಣುಕಾ ಮಂದಿರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದ ಬಹುತೇಕ ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದವು. ವಿವಿಧ ಸಂಘಟನೆಗಳು ಬಂದ್ಗೆ ಬೆಂಬಲ ನೀಡಿದವು. ಪ್ರತಿಭಟನಾಕಾರರು ಬಸ್ ಹಾಗೂ ಇತರ ವಾಹನಗಳನ್ನು ತಡೆದು ಬಂದ್ಗೆ ಬೆಂಬಲಿಸುವಂತೆ ಮನವಿ ಮಾಡಿದರು. ಆದರೆ ಬಲವಂತದ ಬಂದ್ಗೆ ಅವಕಾಶವಿಲ್ಲ ಎಂದು ಪೊಲೀಸರು ಎಚ್ಚರಿಕೆ ನೀಡಿದರು.
ಇದೇ ವಿಚಾರವಾಗಿ ಬಿಜೆಪಿ ನಾಯಕರು ಹಾಗೂ ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆಯಿತು. ಪರಿಸ್ಥಿತಿ ಕೈಮೀರುವ ಹಂತ ತಲುಪುತ್ತಿದ್ದಂತೆ ಪೊಲೀಸರು ರೇಣುಕಾಚಾರ್ಯ ಅವರನ್ನು ವಶಕ್ಕೆ ಪಡೆದರು.
ವಶಕ್ಕೆ ಪಡೆಯುವ ವೇಳೆ ಪೊಲೀಸರು ತಮ್ಮ ಕೈ ಮತ್ತು ಮೈ ಭಾಗಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ರೇಣುಕಾಚಾರ್ಯ ಆರೋಪಿಸಿದ್ದಾರೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರ ಮೇಲೂ ಪೊಲೀಸರು ಹಲ್ಲೆ ನಡೆಸಿದ್ದು, ಸರ್ಕಾರವೇ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಅವರು ದೂರಿದ್ದಾರೆ.
ಬಂದ್ ಯಶಸ್ವಿಯಾಗಿದೆ ಎಂದು ಹೇಳಿರುವ ರೇಣುಕಾಚಾರ್ಯ, ಗುಟ್ಕಾ ನಿಷೇಧವನ್ನು ಹಿಂಪಡೆಯಬೇಕು ಹಾಗೂ ಅಪ್ಪರ್ ಭದ್ರಾಕ್ಕೆ ನೀರು ಬಿಡುಗಡೆ ಮಾಡುವ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ಹಂತದಲ್ಲಿ ವಿಧಾನಸೌಧ ಚಲೋ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.



