ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಲಾಗಿದೆ.
ಥೈಲ್ಯಾಂಡ್‌ನ ಪುಕೆಟ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕನೊಬ್ಬನಿಂದ ಬರೋಬ್ಬರಿ ₹1.07 ಕೋಟಿ ಮೌಲ್ಯದ 3.05 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಪುಕೆಟ್‌ನಿಂದ ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನ ಲಗೇಜ್ ಬ್ಯಾಗ್ ಮೇಲೆ ಕಸ್ಟಮ್ಸ್ ಅಧಿಕಾರಿಗಳಿಗೆ ಅನುಮಾನ ಮೂಡಿದೆ. ಈ ಹಿನ್ನೆಲೆಯಲ್ಲಿ ಬ್ಯಾಗ್‌ನ್ನು ಪರಿಶೀಲನೆ ನಡೆಸಿದಾಗ ಅದರೊಳಗೆ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ.
ಅಧಿಕಾರಿಗಳು ತಕ್ಷಣವೇ 3.05 ಕೆಜಿ ತೂಕದ ಹೈಡ್ರೋಪೋನಿಕ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಇದರ ಅಂದಾಜು ಮೌಲ್ಯ ₹1.07 ಕೋಟಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾದಕ ವಸ್ತುವನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಪ್ರಯಾಣಿಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
ಪ್ರಯಾಣಿಕನು ಗಾಂಜಾವನ್ನು ಎಲ್ಲಿಂದ ಪಡೆದುಕೊಂಡಿದ್ದ, ಬೆಂಗಳೂರಿಗೆ ತಂದು ಯಾರಿಗೆ ಹಸ್ತಾಂತರಿಸಲು ಉದ್ದೇಶಿಸಿದ್ದ ಹಾಗೂ ಇದರ ಹಿಂದೆ ಯಾವುದೇ ಮಾದಕ ವಸ್ತು ಸಾಗಾಟ ಜಾಲ ಕಾರ್ಯನಿರ್ವಹಿಸುತ್ತಿದೆಯೇ ಎಂಬುದರ ಕುರಿತು ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ನಾರ್ಕೋಟಿಕ್ ಡ್ರಗ್ಸ್ ಅಂಡ್ ಸೈಕೋಟ್ರೋಪಿಕ್ ಸಬ್‌ಸ್ಟೆನ್ಸಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಜಪ್ತಿಯಾಗಿರುವ ಮಾದಕ ವಸ್ತುವಿನ ಮೂಲ ಹಾಗೂ ಆರೋಪಿಯ ಸಂಪರ್ಕಗಳ ಬಗ್ಗೆ ತನಿಖೆ ನಡೆಯುತ್ತಿದೆ.



