HomeBengaluru NewsBigg Boss Kannada 13: ಅನುಮತಿ ಇಲ್ಲದೆ ಶೋ ಆರಂಭವಾಗುತ್ತಾ? ಜಿಲ್ಲಾಧಿಕಾರಿ ಹೇಳಿದ್ದೇನು?

Bigg Boss Kannada 13: ಅನುಮತಿ ಇಲ್ಲದೆ ಶೋ ಆರಂಭವಾಗುತ್ತಾ? ಜಿಲ್ಲಾಧಿಕಾರಿ ಹೇಳಿದ್ದೇನು?

For Dai;y Updates Join Our whatsapp Group

ಬೆಂಗಳೂರು: ಬಹುನಿರೀಕ್ಷಿತ ‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋ ಆರಂಭಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ, ಕಾರ್ಯಕ್ರಮ ನಡೆಸಲು ಅಗತ್ಯ ಅನುಮತಿಗಳ ವಿಚಾರದಲ್ಲಿ ಗೊಂದಲ ಉಂಟಾಗಿದೆ.

ಸೆಪ್ಟೆಂಬರ್ 6ರಂದು ಶೋ ಆರಂಭಿಸುವುದಾಗಿ ಕಲರ್ಸ್ ಕನ್ನಡ ವಾಹಿನಿ ಈಗಾಗಲೇ ಘೋಷಣೆ ಮಾಡಿದ್ದರೂ, ಜಿಲ್ಲಾಡಳಿತಕ್ಕೆ ಈವರೆಗೆ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ತಿಳಿಸಿದ್ದಾರೆ.

ಬಿಗ್ ಬಾಸ್ ಶೋ ನಡೆಯುವ ಜಾಲಿವುಡ್‌ ಸಂಸ್ಥೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ‘ಕನ್ಸೆಂಟ್ ಫಾರ್ ಎಸ್ಟಾಬ್ಲಿಷ್‌ಮೆಂಟ್’ಗೆ ಅನುಮತಿ ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ. ಅನುಮೋದನೆ ಮಂಡಳಿಯಲ್ಲಿ ಬಾಕಿಯಿದ್ದು, ಪರಿಸರ ಇಲಾಖೆ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಾಲಿನ್ಯ ನಿಯಂತ್ರಣ ಮಂಡಳಿ ನೀಡುವ ಸೂಚನೆಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಆದರೆ ಬಿಗ್ ಬಾಸ್ ಶೋ ನಡೆಸಲು ಜಿಲ್ಲಾಡಳಿತದಿಂದ ಅನುಮತಿ ಪಡೆಯುವ ಸಂಬಂಧ ಯಾವುದೇ ಅರ್ಜಿ ಬಂದಿಲ್ಲ ಎಂದು ಯಶವಂತ್ ಗುರುಕರ್ ಸ್ಪಷ್ಟಪಡಿಸಿದ್ದಾರೆ.

‘ಜಿಲ್ಲಾಡಳಿತಕ್ಕೆ ಯಾವುದೇ ರೀತಿಯ ಅಪ್ಲಿಕೇಷನ್ ಬಂದಿಲ್ಲ. ಅರ್ಜಿ ಬಂದ ಬಳಿಕ ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಕೂಡ ಬಿಗ್ ಬಾಸ್ ಕಾರ್ಯಕ್ರಮದ ಅನುಮತಿ ಕುರಿತು ಪ್ರತಿಕ್ರಿಯಿಸಿದ್ದಾರೆ. ಬಿಗ್ ಬಾಸ್ ರಿಯಾಲಿಟಿ ಶೋ ನಡೆಸಲು ಅಗತ್ಯ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಅವರು ಹೇಳಿದ್ದಾರೆ.

ಆಯೋಜಕರು ಸಲ್ಲಿಸುವ ಅರ್ಜಿಯಲ್ಲಿರುವ ಮಾಹಿತಿಯ ಆಧಾರದ ಮೇಲೆ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಅರ್ಜಿಯಲ್ಲಿರುವ ಅಂಶಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ನಿಯಮಾನುಸಾರ ಅನುಮತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಕಳೆದ ವರ್ಷವೂ ಬಿಗ್ ಬಾಸ್ ಕನ್ನಡ ಶೋಗೆ ಅಗತ್ಯ ಅನುಮತಿಗಳ ವಿಚಾರದಲ್ಲಿ ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿಯೂ ಅನುಮತಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಕಾರ್ಯಕ್ರಮ ಆರಂಭಿಸುವ ಘೋಷಣೆ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ ಸೆಪ್ಟೆಂಬರ್ 6ರಿಂದ ಆರಂಭವಾಗಲಿದೆ ಎಂದು ಈಗಾಗಲೇ ಘೋಷಿಸಲಾಗಿದೆ. ಕನ್ನಡದ ಜತೆಗೆ ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಯ ಬಿಗ್ ಬಾಸ್ ಆವೃತ್ತಿಗಳೂ ಇದೇ ದಿನ ಆರಂಭವಾಗಬೇಕಿವೆ.

ಆದರೆ ಕನ್ನಡ ಬಿಗ್ ಬಾಸ್ ಆಯೋಜಕರು ಜಿಲ್ಲಾಡಳಿತದಿಂದ ಅಗತ್ಯ ಅನುಮತಿ ಪಡೆಯಲು ಈವರೆಗೆ ಅರ್ಜಿ ಸಲ್ಲಿಸಿಲ್ಲ ಎಂಬ ಮಾಹಿತಿ ಹೊರಬಿದ್ದಿರುವ ಹಿನ್ನೆಲೆಯಲ್ಲಿ, ನಿಗದಿತ ದಿನಾಂಕದಂದು ಕಾರ್ಯಕ್ರಮ ಆರಂಭವಾಗುತ್ತದೆಯೇ ಎಂಬ ಪ್ರಶ್ನೆ ಇದೀಗ ಮೂಡಿದೆ. ಅನುಮತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೇ ಶೋ ಆರಂಭಕ್ಕೆ ಅಂತಿಮ ಸ್ಪಷ್ಟತೆ ಸಿಗುವ ಸಾಧ್ಯತೆಯಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img