ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಅಸಭ್ಯವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನ ವಿರುದ್ಧ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಚಿಕ್ಕಮಗಳೂರಿನ 26 ವರ್ಷದ ಯುವಕ ತನ್ನ ವಿರುದ್ಧ ವಿಚಾರಣಾಧೀನ ನ್ಯಾಯಾಲಯದಲ್ಲಿನ ಪ್ರಕ್ರಿಯೆ ವಜಾಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಅರ್ಜಿದಾರ ಯುವಕ ಬಸ್ನಿಂದ ಇಳಿದ ಬಳಿಕ ಶೌಚಾಲಯ ಹುಡುಕಾಡಿ, ಬಳಿಕ ಬಯಲಿನಲ್ಲಿ ಮೂತ್ರ ವಿಸರ್ಜನೆಗೆ ತೆರಳಿ ಹಿಂತಿರುಗುತ್ತಿದ್ದ ವೇಳೆ ದೂರುದಾರೆ ಅಲ್ಲಿಗೆ ಬಂದಿದ್ದರು ಎಂಬುದನ್ನು ಪರಿಗಣಿಸಿದ ಪೀಠ, ಈ ಘಟನೆಯಲ್ಲಿ ಮಹಿಳೆಯ ಘನತೆಗೆ ಚ್ಯುತಿಯಾಗುವಂತಹ ಅಂಶ ಕಂಡುಬಂದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಈ ಪ್ರಕರಣದ ವಿಚಾರಣೆ ಮುಂದುವರಿಯಲು ಅನುಮತಿಸುವುದು ಕಾನೂನು ಪ್ರಕ್ರಿಯೆಯ ದುರ್ಬಳಕೆಯಾಗುತ್ತದೆ ಎಂದು ಹೇಳಿರುವ ಪೀಠ, ಪ್ರಕರಣವನ್ನು ರದ್ದುಪಡಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರ ಧರ್ಮಶಾಸ್ತ್ರದ ವಿದ್ಯಾರ್ಥಿಯಾಗಿದ್ದು ದೆಹಲಿಯಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದಾನೆಂದೂ, ಆತ ಮೂತ್ರ ವಿಸರ್ಜನೆಗೆ ಹೋಗಿದ್ದನೇ ಹೊರತು ದೂರಿನಲ್ಲಿ ಬೇರೇನೂ ಇಲ್ಲ ಎಂದೂ ಪೀಠಕ್ಕೆ ವಿವರಿಸಿದರು. ಇದಕ್ಕೆ ಪ್ರತಿಯಾಗಿ ದೂರುದಾರರ ಪರ ವಕೀಲರು, ಅರ್ಜಿದಾರ ಆರೋಪಿ ಅಸಭ್ಯವಾಗಿ ವರ್ತಿಸಿ ಅಸಭ್ಯ ಸನ್ನೆ ಮಾಡಿದ್ದಾನೆ ಎಂದು ಪ್ರತಿಪಾದಿಸಿದರು.
ಪ್ರಕರಣದ ಹಿನ್ನೆಲೆ: ದೂರುದಾರ ಯುವತಿ 2026ರ ಜನವರಿ 24ರಂದು ಮಧ್ಯಾಹ್ನ 3.40ರ ಸುಮಾರಿಗೆ ಬೆಂಗಳೂರಿನ ಹೆಬ್ಬಾಳ ರಿಂಗ್ ರಸ್ತೆ ಬಳಿ ಬಸ್ನಿಂದ ಇಳಿದು ಮನೆಗೆ ತೆರಳುತ್ತಿದ್ದರು. ಈ ವೇಳೆ ಎದುರಿಗೆ ಬಂದ ಅಪರಿಚಿತ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ, ಆತ ತಪ್ಪಿಸಿಕೊಂಡು ಹೋಗುತ್ತಿದ್ದಾಗ ಸುತ್ತಮುತ್ತಲಿನ ಜನರ ನೆರವಿನಿಂದ ಹಿಡಿದಿಟ್ಟಿದ್ದಾಗಿ ಯುವತಿ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 75(2)ರ ಅಡಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.



