ಚಿಕ್ಕಬಳ್ಳಾಪುರ: ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಪ್ರಶಾಂತನಗರದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಶ್ರೇಯಾ ಎಂದು ಗುರುತಿಸಲಾಗಿದೆ.
ಶ್ರೇಯಾ ಮೂಡಬಿದ್ರೆಯ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಅನಾರೋಗ್ಯದ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ ಚಿಕ್ಕಬಳ್ಳಾಪುರದಲ್ಲಿರುವ ತನ್ನ ಮನೆಗೆ ಬಂದಿದ್ದಳು ಎನ್ನಲಾಗಿದೆ.
ಮನೆಯಲ್ಲಿದ್ದವರು ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಶ್ರೇಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಮಗಳ ಸಾವಿನ ಸುದ್ದಿ ತಿಳಿದು ತಾಯಿ ನಾಗಲಕ್ಷ್ಮಿ ಆಘಾತಕ್ಕೊಳಗಾಗಿದ್ದಾರೆ. ಅವರು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ದಾದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಂದೆ ಪಿಡಿಒ ಆಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.
ಘಟನೆ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



