ವಿಜಯಸಾಕ್ಷಿ ಸುದ್ದಿ, ಗದಗ: ಉತ್ತರಾಖಂಡದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಮಾನವಾಗಿದೆ ಎಂದು ಆರೋಪಿಸಲಾದ ಘಟನೆ ಕುರಿತು ಪ್ರಶ್ನಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಸೆಪ್ಟೆಂಬರ್ 7ರಂದು ಸಂಜೆ 4 ಗಂಟೆಗೆ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಯೂಥ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಪ್ಪು ವೃತ್ತದಿಂದ ಜಿಲ್ಲಾಡಳಿತ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಜಿಲ್ಲಾ ಕಾಂಗ್ರೆಸ್ನ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿ.ಬಿ. ಅಸೂಟಿ, ಅಶೋಕ ಮಂದಾಲಿ, ಶಕುಂತಲಾ ಅಕ್ಕಿ, ಬಸವರಾಜ ಕಡೆಮನಿ ಸೇರಿದಂತೆ ಜಿಲ್ಲಾ ಕಾಂಗ್ರೆಸ್ನ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.



