ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮುಕ್ತಿಮಂದಿರ ಧರ್ಮಕ್ಷೇತ್ರವು ನನ್ನ ನಂಬಿಕೆಯ ಹಾಗೂ ಹೃದಯಕ್ಕೆ ಹತ್ತಿರವಾದ ದೈವಿಕ ಮತ್ತು ಪವಿತ್ರ ಕ್ಷೇತ್ರವಾಗಿದೆ. ಈ ಹಿಂದೆ ಲಿಂ. ವೀರಗಂಗಾಧರ ಜಗದ್ಗುರುಗಳ (ಅಜ್ಜಯ್ಯ) ಕರ್ತೃಗದ್ದುಗೆಯ ಮುಂದೆ ಸಲ್ಲಿಸಿದ್ದ ಪ್ರಾರ್ಥನೆ ಮತ್ತು ಸಂಕಲ್ಪ ಈಡೇರಿದ ಹಿನ್ನೆಲೆಯಲ್ಲಿ ಮತ್ತೊಮ್ಮೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದೇನೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿ, ಸಮೃದ್ಧ ಬೆಳೆ ಬರಲಿ, ರೈತರು ಹಾಗೂ ಜನರು ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.
ಗದಗ ಜಿಲ್ಲೆಯ ಬರ ಪರಿಸ್ಥಿತಿ ಪರಿಶೀಲನೆ ನಡೆಸಿದ ಬಳಿಕ ಮಂಗಳವಾರ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರಕ್ಕೆ ಭೇಟಿ ನೀಡಿದ ಅವರು, ಲಿಂ. ವೀರಗಂಗಾಧರ ಜಗದ್ಗುರುಗಳ ಕರ್ತೃಗದ್ದುಗೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಕ್ತಿಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು ಹಾಗೂ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯರ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಅಭಿಷೇಕ, ಅಷ್ಟೋತ್ತರ ಹಾಗೂ ಮಹಾಮಂಗಳಾರತಿ ನೆರವೇರಿಸಿದರು. ಬಳಿಕ ಕೆಲಕಾಲ ಕರ್ತೃಗದ್ದುಗೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಮಾನವ ಧರ್ಮಕ್ಕೆ ಜಯವಾಗಲಿ ಹಾಗೂ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಸಂದೇಶ ಸಾರಿದ ಲಿಂ. ವೀರಗಂಗಾಧರ ಜಗದ್ಗುರುಗಳ ಪಾವನ ಕ್ಷೇತ್ರ ಇದಾಗಿದೆ. ಈ ಕ್ಷೇತ್ರದ ಮೇಲೆ ನನಗೆ ಅಪಾರವಾದ ಶ್ರದ್ಧೆಯಿದೆ. ಭಕ್ತ ಮತ್ತು ಭಗವಂತನ ನಡುವೆ ಪವಿತ್ರ ಬಂಧವನ್ನು ಬೆಸೆಯುವ ಶಕ್ತಿ ಇಂತಹ ಧರ್ಮಕ್ಷೇತ್ರಗಳಿಗೆ ಇದೆ ಎಂದು ಹೇಳಿದರು.
ಬಳಿಕ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರೊಂದಿಗೆ ಕ್ಷೇತ್ರದಲ್ಲಿ ನಡೆಯುತ್ತಿರುವ ತ್ರಿಕೋಟಿ ಶಿವಲಿಂಗ ಸ್ಥಾಪನೆ, ಸಮುದಾಯ ಭವನ, ಅನ್ನದಾಸೋಹ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿ, ಮುಕ್ತಿಮಂದಿರ ಧರ್ಮಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದ ಸಕಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಗದಗ ಜಿಲ್ಲೆಯ ಬರ ಪರಿಸ್ಥಿತಿಯನ್ನು ಖುದ್ದಾಗಿ ಅರಿಯುವ ಉದ್ದೇಶದಿಂದ ಜಿಲ್ಲೆಗೆ ಭೇಟಿ ನೀಡಿದ್ದೇನೆ. ಜಿಲ್ಲೆಯ ಏಳು ತಾಲೂಕುಗಳ ಪೈಕಿ ಗಜೇಂದ್ರಗಡ ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ನೆಲದ ಮೇಲಿನ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದರು.
ಜಿಲ್ಲೆಯಲ್ಲಿ ಶೇ. ೪೦ರಿಂದ ೪೪ರಷ್ಟು ಮಳೆ ಕೊರತೆಯಾಗಿದ್ದು, ಬರ ಪರಿಸ್ಥಿತಿ ಗಂಭೀರವಾಗಿದೆ ಎಂಬುದು ಮನವರಿಕೆಯಾಗಿದೆ. ರೈತರ ಜಮೀನುಗಳಿಗೆ ತೆರಳಿ ಹತ್ತಿ, ಕಡಲೆಕಾಯಿ, ಜೋಳ ಹಾಗೂ ಸೂರ್ಯಕಾಂತಿ ಬೆಳೆಗಳ ಸ್ಥಿತಿಯನ್ನು ಕಣ್ಣಾರೆ ಕಂಡಿದ್ದೇನೆ. ರೈತರು ಎದುರಿಸುತ್ತಿರುವ ಸಂಕಷ್ಟದ ಪ್ರಮಾಣವೂ ತಿಳಿದುಬಂದಿದೆ ಎಂದರು.
ಬರಪೀಡಿತ ತಾಲೂಕುಗಳನ್ನು ಘೋಷಿಸಲು ಸರ್ಕಾರದ ನಿಗದಿತ ಮಾರ್ಗಸೂಚಿಗಳಿವೆ. ಅದರಂತೆ ಸಮಗ್ರ ಅಧ್ಯಯನ ನಡೆಸಿ ಶೀಘ್ರದಲ್ಲೇ ಎರಡನೇ ಹಂತದ ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಡಿ.ಕೆ. ಶಿವಕುಮಾರ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲೆಯ ಶಾಸಕರು ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವಂತೆ ಮನವಿ ಸಲ್ಲಿಸಿದ್ದಾರೆ. ಮನವಿಯ ಜತೆಗೆ ವಾಸ್ತವ ಪರಿಸ್ಥಿತಿಯನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ಹೇಳಿದರು.
ವಿಧಾನಸಭೆಯಲ್ಲಿ ಬರ ಪರಿಸ್ಥಿತಿ ಕುರಿತು ಸಮಗ್ರವಾಗಿ ಚರ್ಚಿಸಿ, ಸರ್ಕಾರ ನೂರು ದಿನಗಳಲ್ಲಿ ಕೈಗೊಂಡಿರುವ ಕ್ರಮಗಳು ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ವಿವರಿಸಲು ಉದ್ದೇಶಿಸಿದ್ದೆ. ಆದರೆ ಪ್ರತಿಪಕ್ಷದವರು ಅದಕ್ಕೆ ಅವಕಾಶ ನೀಡಲಿಲ್ಲ ಎಂದು ಮುಖ್ಯಮಂತ್ರಿ ಟೀಕಿಸಿದರು.
ಈ ಸಂದರ್ಭದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಶಾಸಕರಾದ ಡಾ. ಚಂದ್ರು ಲಮಾಣಿ, ಎನ್.ಎಚ್. ಕೋನರಡ್ಡಿ, ಯಾಸೀರ್ ಖಾನ್ ಪಠಾಣ, ಆನಂದಸ್ವಾಮಿ ಗಡ್ಡದೇವರಮಠ, ಶ್ರೀನಿವಾಸ ಮಾನೆ, ಮಾಜಿ ಶಾಸಕರಾದ ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ ಸೇರಿದಂತೆ ಹಲವು ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿ.ಕೆ. ಶಿವಕುಮಾರ ಅಭಿಮಾನಿ ಬಳಗದವರು ಉಪಸ್ಥಿತರಿದ್ದರು.
ಕೋಟ್
ಮುಕ್ತಿಮಂದಿರ ನನ್ನ ನಂಬಿಕೆಯ ಹಾಗೂ ಹೃದಯಕ್ಕೆ ಹತ್ತಿರವಾದ ಪವಿತ್ರ ಕ್ಷೇತ್ರ. ರಾಜ್ಯದಲ್ಲಿ ಉತ್ತಮ ಮಳೆಯಾಗಿ, ಸಮೃದ್ಧ ಬೆಳೆ ಬರಲಿ; ರೈತರು ಮತ್ತು ಜನರು ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಅಜ್ಜಯ್ಯನ ಕರ್ತೃಗದ್ದುಗೆಯಲ್ಲಿ ಪ್ರಾರ್ಥಿಸಿದ್ದೇನೆ.
— ಡಿ.ಕೆ. ಶಿವಕುಮಾರ, ಮುಖ್ಯಮಂತ್ರಿ



