ವಿಜಯಸಾಕ್ಷಿ ಸುದ್ದಿ, ಗದಗ: ಗದಗ ತಾಲೂಕಿನ ತಿಮ್ಮಾಪುರ ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕ್ರಮ ಕೈಗೊಳ್ಳಬೇಕು ಹಾಗೂ ರೈತರು ಮತ್ತು ಗ್ರಾಮಸ್ಥರು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಸಂಸದರಿಗೆ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿರುವ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಲೋಕಸಭಾ ಸಂಸದರ ನಿವಾಸಕ್ಕೆ ಭೇಟಿ ನೀಡಿದ ಅವರು, ತಿಮ್ಮಾಪುರ ಗ್ರಾಮ ಮತ್ತು ಸುತ್ತಮುತ್ತಲಿನ ಜನರ ಹಿತದೃಷ್ಟಿಯಿಂದ ವಿವಿಧ ಬೇಡಿಕೆಗಳನ್ನು ಸಂಸದರ ಅನುದಾನ ಹಾಗೂ ಸಂಬಂಧಪಟ್ಟ ಇಲಾಖೆಗಳ ಮೂಲಕ ಈಡೇರಿಸುವಂತೆ ಒತ್ತಾಯಿಸಿದರು.
ತಿಮ್ಮಾಪುರ-ಕೊಟುಮಚಗಿ ರಸ್ತೆ ಸಂಪೂರ್ಣ ಹಾಳಾಗಿದ್ದು, ಕೂಡಲೇ ಡಾಂಬರೀಕರಣಗೊಳಿಸಬೇಕು. ಅಲ್ಲದೆ ಮಾರ್ಗ ಮಧ್ಯದಲ್ಲಿರುವ ಕಣಿ ಹಳ್ಳಕ್ಕೆ ಮೇಲ್ಸೇತುವೆ ನಿರ್ಮಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.
ತಿಮ್ಮಾಪುರ ಗ್ರಾಮದಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಶಾಖೆ ಇಲ್ಲದಿರುವುದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಕೂಡಲೇ ಗ್ರಾಮದಲ್ಲಿ ಬ್ಯಾಂಕ್ ಶಾಖೆ ತೆರೆಯಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಗದಗ ಜಿಲ್ಲೆಯಲ್ಲಿ ತೀವ್ರ ಬರಗಾಲವಿದ್ದು, ಸರ್ಕಾರ ಕೇವಲ ಒಂದು ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಿದೆ. ಜಿಲ್ಲೆಯ ಎಲ್ಲ ೭ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಟ್ಟದಲ್ಲಿ ಒತ್ತಡ ತರಬೇಕು ಎಂದು ಆಗ್ರಹಿಸಲಾಗಿದೆ.
ತಿಮ್ಮಾಪುರ-ಹರ್ಲಾಪುರ ಸಂಪರ್ಕ ರಸ್ತೆಯನ್ನು ಡಾಂಬರೀಕರಣಗೊಳಿಸಲು ಅಗತ್ಯ ಅನುದಾನ ಮಂಜೂರು ಮಾಡಬೇಕು ಎಂಬ ಬೇಡಿಕೆಯನ್ನೂ ಸಲ್ಲಿಸಲಾಗಿದೆ.
ಹರ್ಲಾಪುರ ರೈಲ್ವೆ ನಿಲ್ದಾಣದಲ್ಲಿ ಹಂಪಿ ಎಕ್ಸ್ಪ್ರೆಸ್ ಹಾಗೂ ತಿರುಪತಿ ಎಕ್ಸ್ಪ್ರೆಸ್ ರೈಲುಗಳಿಗೆ ನಿಲುಗಡೆ ನೀಡುವಂತೆ ರೈಲ್ವೆ ಸಚಿವಾಲಯಕ್ಕೆ ಶಿಫಾರಸು ಮಾಡಬೇಕು. ಇದರಿಂದ ಸುತ್ತಲಿನ ೨೦ಕ್ಕೂ ಹೆಚ್ಚು ಹಳ್ಳಿಗಳ ಜನರಿಗೆ ಅನುಕೂಲವಾಗಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಮೇಲ್ಕಂಡ ಬೇಡಿಕೆಗಳು ರೈತರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಅತ್ಯಂತ ಅಗತ್ಯವಾಗಿದ್ದು, ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.
ಮನವಿಯನ್ನು ಸ್ವೀಕರಿಸಿದ ಸಂಸದರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಯಲ್ಲಪ್ಪ ಎಚ್. ಬಾಬರಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಅಂದಪ್ಪ ಕೊಳೂರು, ರಾಮಣ್ಣ ಖಂಡ್ರೆ ಹಾಗೂ ಶಿವಕುಮಾರ ಯತ್ನಟ್ಟಿ ಉಪಸ್ಥಿತರಿದ್ದರು.



