ಬೆಂಗಳೂರು: ನಗರದ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುವವರಿಗೆ ಸಂಚಾರ ಪೊಲೀಸರು ಕಠಿಣ ಎಚ್ಚರಿಕೆ ನೀಡಿದ್ದಾರೆ.
ಅಕ್ರಮ ಪಾರ್ಕಿಂಗ್ ವಿರುದ್ಧದ ಟೋಯಿಂಗ್ ಕಾರ್ಯಾಚರಣೆಯನ್ನು ಮತ್ತೆ ಆರಂಭಿಸಿರುವ ಪೊಲೀಸರು, ನಿಯಮ ಉಲ್ಲಂಘಿಸಿ ನಿಲ್ಲಿಸಿರುವ ವಾಹನಗಳನ್ನು ತೆರವುಗೊಳಿಸುತ್ತಿದ್ದಾರೆ.
ಕಳೆದ ಒಂದು ವಾರದಿಂದ ನಗರದ ಹಲವೆಡೆ ಟೋಯಿಂಗ್ ಕಾರ್ಯಾಚರಣೆ ತೀವ್ರಗೊಂಡಿದ್ದು, ವಿಶೇಷವಾಗಿ ಶಾಂತಿನಗರ ಸುತ್ತಮುತ್ತ ಅಕ್ರಮವಾಗಿ ನಿಲ್ಲಿಸಿರುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ರಸ್ತೆ ಬದಿಗಳಲ್ಲಿ ಹಾಗೂ ನೋ ಪಾರ್ಕಿಂಗ್ ವಲಯಗಳಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಲಾಗಿದೆ.
ಶಾಂತಿನಗರದ ಸೇಂಟ್ ಜೋಸೆಫ್ ಕಾಲೇಜು ಮತ್ತು ದಿವ್ಯಶ್ರೀ ಚೇಂಬರ್ಸ್ ಸಮೀಪ ನೋ ಪಾರ್ಕಿಂಗ್ ಫಲಕಗಳನ್ನು ಅಳವಡಿಸಲಾಗಿದೆ. ಆದರೂ ನಿಯಮ ಉಲ್ಲಂಘಿಸಿ ವಾಹನಗಳನ್ನು ನಿಲ್ಲಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ಟೋಯಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಅಕ್ರಮವಾಗಿ ನಿಲ್ಲಿಸಿರುವ ದ್ವಿಚಕ್ರ ವಾಹನಗಳಿಗೆ 1,150 ರೂ. ಹಾಗೂ ನಾಲ್ಕು ಚಕ್ರದ ವಾಹನಗಳಿಗೆ 1,500 ರೂ. ದಂಡ ವಿಧಿಸಲಾಗುತ್ತಿದೆ. ಟೋಯಿಂಗ್ ಶುಲ್ಕ ಸೇರಿದಂತೆ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ದಂಡವನ್ನು ವಾಹನ ಮಾಲೀಕರು ಪಾವತಿಸಬೇಕಾಗುತ್ತದೆ.
ಅಶೋಕ್ ನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಪಾರ್ಕಿಂಗ್ ಕುರಿತು ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗುವಂತೆ ರಸ್ತೆ ಬದಿಗಳಲ್ಲಿ ನಿಲ್ಲಿಸಿರುವ ವಾಹನಗಳ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
ನಗರದ ಪ್ರಮುಖ ರಸ್ತೆಗಳಲ್ಲಿ ಅಕ್ರಮ ಪಾರ್ಕಿಂಗ್ನಿಂದ ಉಂಟಾಗುತ್ತಿರುವ ಸಂಚಾರ ದಟ್ಟಣೆಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸುವ ಸಾಧ್ಯತೆ ಇದೆ. ಆದ್ದರಿಂದ ವಾಹನ ಸವಾರರು ನೋ ಪಾರ್ಕಿಂಗ್ ಪ್ರದೇಶಗಳಲ್ಲಿ ವಾಹನಗಳನ್ನು ನಿಲ್ಲಿಸದಂತೆ ಹಾಗೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.



