ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ವಾಸ್ತವ್ಯ ಮಾಡದೇ, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಉನ್ನತ ಅಧಿಕಾರಿಗಳಿಗೆ ಅಧಿಕೃತ ಠರಾವು ಮೂಲಕ ವರದಿ ಸಲ್ಲಿಸಲಾಗುವುದು ಎಂದು ಶಾಸಕ ಡಾ. ಚಂದ್ರು ಲಮಾಣಿ ಎಚ್ಚರಿಕೆ ನೀಡಿದರು.
ಶನಿವಾರ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನದ ಅಧ್ಯಕ್ಷತೆ ವಹಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿಗಳ ನಿರ್ದೇಶನದಂತೆ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸ್ತವ್ಯ ಮಾಡಬೇಕು. ಇದನ್ನು ಖಚಿತಪಡಿಸಲು ಜಿಪಿಎಸ್ ಫೋಟೋ ಹಾಕಬೇಕು. ಕೇಂದ್ರಸ್ಥಾನದಲ್ಲಿ ವಾಸ್ತವ್ಯ ಮಾಡದ ಅಧಿಕಾರಿಗಳು ಕೂಡಲೇ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.
ಬೆಳಗಿನ ಜಾವವೇ ಸಾರಾಯಿ ಮಾರಾಟ?
ಶಿರಹಟ್ಟಿ ಪಟ್ಟಣದ ಕೆಲ ಅಂಗಡಿಗಳಲ್ಲಿ ಬೆಳಗಿನ ಜಾವ 4 ಗಂಟೆಗೇ ಅಕ್ರಮವಾಗಿ ಸಾರಾಯಿ ಮಾರಾಟವಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. “ಚಹಾ ಸಿಗುವುದಿಲ್ಲ, ಆದರೆ ಸಾರಾಯಿ ಸಿಗುತ್ತದೆ. ಇದರಿಂದ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುವ ಘಟನೆಗಳೂ ನಡೆಯುತ್ತಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಲಮಾಣಿ, ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕುವಂತೆ ಸೂಚಿಸಿದರು.
ಸಭೆಗೆ ಗೈರುಹಾಜರಾಗಿದ್ದ ಅಬಕಾರಿ ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ಕ್ರಮಕ್ಕೆ ವರದಿ ಸಲ್ಲಿಸುವಂತೆ ತಹಸೀಲ್ದಾರ್ ಕೆ. ರಾಘವೇಂದ್ರರಾವ್ ಹಾಗೂ ಸಿಪಿಐ ಬಿ.ವಿ. ನ್ಯಾಮಗೌಡ ಅವರಿಗೆ ಸೂಚಿಸಿದರು.
ಎಪಿಎಂಸಿ ಸ್ವಚ್ಛಗೊಳಿಸಿ, ಬೀದಿ ವ್ಯಾಪಾರಿಗಳಿಗೆ ವ್ಯವಸ್ಥೆ
ಶಿರಹಟ್ಟಿ ಸರ್ಕಾರಿ ಶಾಲೆ ಸುತ್ತಮುತ್ತ ಒತ್ತುವರಿಯಾಗಿದ್ದ ಅಂಗಡಿಗಳನ್ನು ತೆರವುಗೊಳಿಸಲಾಗಿದ್ದು, ಬಸ್ ನಿಲ್ದಾಣದ ಸಮೀಪದ ಬೀದಿ ವ್ಯಾಪಾರದಿಂದ ಸಾರ್ವಜನಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಪಿಎಂಸಿ ಆವರಣವನ್ನು ಸ್ವಚ್ಛಗೊಳಿಸಿ, ಬೀದಿ ವ್ಯಾಪಾರಿಗಳಿಗೆ ಒಂದು ವಾರದೊಳಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಪಪಂ ಮುಖ್ಯಾಧಿಕಾರಿಗೆ ಶಾಸಕ ಲಮಾಣಿ ಸೂಚಿಸಿದರು.
ಫುಡ್ ಇಲ್ಲದಿದ್ದರೂ ಇಂದಿರಾ ಕ್ಯಾಂಟೀನ್‌ಗೆ ಬಿಲ್?
ಇಂದಿರಾ ಕ್ಯಾಂಟೀನ್‌ನಲ್ಲಿ ಕಳೆದ ಮೂರು ವರ್ಷಗಳಿಂದ ಆಹಾರ ಸಿಗದಿದ್ದರೂ ಪ್ರತಿ ತಿಂಗಳು ಬಿಲ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ₹5ಕ್ಕೆ ನೀಡುವ ಆಹಾರಕ್ಕೆ ಸರ್ಕಾರ ₹26 ಪಾವತಿಸುತ್ತಿದ್ದು, ಸಾರ್ವಜನಿಕರಿಗೆ ಸಮರ್ಪಕ ಆಹಾರ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಪಪಂ ಮುಖ್ಯಾಧಿಕಾರಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ತಾಪಂ ಇಒ ಆರ್.ವಿ. ದೊಡ್ಡಮನಿ, ಸಿಪಿಐ ಬಿ.ವಿ. ನ್ಯಾಮಗೌಡ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವೀರಯ್ಯ ಮಠಪತಿ, ಪಪಂ ಮುಖ್ಯಾಧಿಕಾರಿ ನೀಲೇಶ ಹಾದಿಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
165ಕ್ಕೂ ಹೆಚ್ಚು ಅರ್ಜಿ ಸ್ವೀಕಾರ
ಮಧ್ಯಾಹ್ನ 3.30ರವರೆಗೆ 165ಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳನ್ನು ಐಪಿಜಿಆರ್‌ಎಸ್ ಮೂಲಕ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಲಾಗಿನ್‌ಗೆ ಕಳುಹಿಸಲಾಗಿದೆ. ಅರ್ಜಿದಾರರಿಗೆ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಉತ್ತರ ನೀಡಲಾಗುವುದು ಎಂದು ತಹಸೀಲ್ದಾರ್ ಕೆ. ರಾಘವೇಂದ್ರರಾವ್ ತಿಳಿಸಿದರು.



