ಮಂಡ್ಯ: ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಚಲಿಸುತ್ತಿದ್ದ ಕಾರೊಂದು ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಮಂಡ್ಯ ಹೊರವಲಯದ ಇಂಡುವಾಳು ಬಳಿ ನಡೆದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೈಸೂರಿನಲ್ಲಿ ನೆಲೆಸಿರುವ ಸ್ಕನದ್ ಎಂಬುವವರಿಗೆ ಸೇರಿದ KA-05 ME-7634 ನೋಂದಣಿ ಸಂಖ್ಯೆಯ ಕಾರು ಬೆಂಕಿಗಾಹುತಿಯಾಗಿದೆ. ಸ್ಕನದ್ ಹಾಗೂ ಮತ್ತೊಬ್ಬರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
ಬಟ್ಟೆ ವ್ಯಾಪಾರ ಮುಗಿಸಿಕೊಂಡು ಮೈಸೂರಿನತ್ತ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಇಬ್ಬರೂ ಕಾರಿನಿಂದ ಕೆಳಗಿಳಿದು ಪ್ರಾಣ ಉಳಿಸಿಕೊಂಡಿದ್ದಾರೆ.
ಇಬ್ಬರೂ ಕಾರಿನಿಂದ ಕೆಳಗಿಳಿದ ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ವಾಹನಕ್ಕೆ ವ್ಯಾಪಿಸಿದೆ. ಪರಿಣಾಮ ಕಾರು ಸಂಪೂರ್ಣವಾಗಿ ಹೊತ್ತಿ ಉರಿದಿದೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಷ್ಟರಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದರ ಕುರಿತು ಪರಿಶೀಲನೆ ನಡೆಯುತ್ತಿದೆ.



