ಭೋಪಾಲ್: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ವಿಷಪೂರಿತ ಮದ್ಯ ಸೇವನೆ ಶಂಕಿತ ಪ್ರಕರಣದಲ್ಲಿ 9 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಶನಿವಾರ (ಸೆ.5) ರಾತ್ರಿ ಘೂಘರ್, ನೌರಾಜ್ ಹಾಗೂ ಬರಾಜ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲವರು ಮದ್ಯ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದರು ಎನ್ನಲಾಗಿದೆ.
ಅಸ್ವಸ್ಥಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ 9 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆ ಬೆನ್ನಲ್ಲೇ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.
ಮೃತರಿಗೆ ವಿಷಪೂರಿತ ಮದ್ಯವೇ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದರೂ, ಇದನ್ನು ಅಧಿಕಾರಿಗಳು ಈವರೆಗೆ ಅಧಿಕೃತವಾಗಿ ದೃಢಪಡಿಸಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ನಿರೀಕ್ಷಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯ ಬಗ್ಗೆಯೂ ಆತಂಕ ವ್ಯಕ್ತವಾಗಿದೆ.
ಈ ಘಟನೆ ಮಧ್ಯಪ್ರದೇಶದಲ್ಲಿ ನಕಲಿ ಅಥವಾ ಅಕ್ರಮ ಮದ್ಯ ತಯಾರಿಕೆ ಹಾಗೂ ಮಾರಾಟದ ಬಗ್ಗೆ ಮತ್ತೊಮ್ಮೆ ಕಳವಳ ಮೂಡಿಸಿದೆ. ಅಸ್ವಸ್ಥಗೊಂಡವರಿಗೆ ಯಾವ ರೀತಿಯ ಮದ್ಯ ಪೂರೈಕೆಯಾಗಿತ್ತು, ಅದರ ಮೂಲ ಏನು ಹಾಗೂ ಸಾವಿಗೆ ನಿಜವಾದ ಕಾರಣವೇನು ಎಂಬುದರ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.



