ಬೆಂಗಳೂರು: ದೇವಾಲಯಕ್ಕೆ ಬರುವ ಭಕ್ತರ ಹಣವನ್ನು ದುರುಪಯೋಗಪಡಿಸಿಕೊಳ್ಳುವುದು ದೇವರಿಗೆ ಎಸಗುವ ವಂಚನೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪ್ರಸಿದ್ಧ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನಕಲಿ ರಸೀದಿಗಳನ್ನು ನೀಡಿ ವಂಚನೆ ಎಸಗಿದ ಆರೋಪ ಎದುರಿಸುತ್ತಿದ್ದ ದ್ವಿತೀಯ ದರ್ಜೆ ಸಹಾಯಕ ರಾಜೇಶ್ ನಾಯಕ್ ಅವರನ್ನು ಸೇವೆಯಿಂದ ವಜಾಗೊಳಿಸಿರುವ ಧಾರ್ಮಿಕ ದತ್ತಿ ಇಲಾಖೆಯ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ತಮ್ಮನ್ನು ಸೇವೆಯಿಂದ ವಜಾಗೊಳಿಸಿರುವ ಕ್ರಮವನ್ನು ಪ್ರಶ್ನಿಸಿ ರಾಜೇಶ್ ನಾಯಕ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ನ್ಯಾಯಪೀಠ, ಲಭ್ಯವಿದ್ದ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಬಳಿಕ ಅರ್ಜಿಯನ್ನು ವಜಾಗೊಳಿಸಿದೆ.
ವಿಚಾರಣೆ ವೇಳೆ, ದೇವಾಲಯಕ್ಕೆ ಬರುವ ಭಕ್ತರ ಹಣವನ್ನು ದುರುಪಯೋಗಪಡಿಸಿಕೊಳ್ಳುವುದು ದೇವರಿಗೇ ಎಸಗುವ ವಂಚನೆಯಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ನಂಬಿಕೆಯ ಹುದ್ದೆಯಲ್ಲಿದ್ದುಕೊಂಡು ಭ್ರಷ್ಟಾಚಾರ ಎಸಗಿದ ಸಂದರ್ಭದಲ್ಲಿ ಸೇವೆಯಿಂದ ವಜಾಗೊಳಿಸುವ ಶಿಕ್ಷೆ ಸೂಕ್ತವಾಗಿದೆ ಎಂದು ಹೈಕೋರ್ಟ್ ಹೇಳಿದೆ.
ಇದೇ ವೇಳೆ, ರಾಜ್ಯದ ಮುಜರಾಯಿ ದೇವಾಲಯಗಳ ಆದಾಯ ಸೋರಿಕೆಯನ್ನು ತಡೆಯಲು ಹಾಗೂ ಆಡಳಿತದಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಡಿಜಿಟಲ್ ಲೆಕ್ಕಪತ್ರ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ದೇವಾಲಯಗಳ ಹಣಕಾಸು ವ್ಯವಹಾರಗಳಲ್ಲಿ ಪಾರದರ್ಶಕತೆ ಹಾಗೂ ಕಟ್ಟುನಿಟ್ಟಿನ ಮೇಲ್ವಿಚಾರಣೆ ಇರಲು ಅಗತ್ಯ ಆಡಳಿತಾತ್ಮಕ ಮಾರ್ಗಸೂಚಿಗಳನ್ನು ರೂಪಿಸುವಂತೆಯೂ ಸೂಚಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮುಜರಾಯಿ ಇಲಾಖೆಯ ಪರವಾಗಿ ವಕೀಲ ಹರೀಶ್ಚಂದ್ರ ಮೋವ್ವಾರ್ ವಾದ ಮಂಡಿಸಿದ್ದರು. ಸಾಕ್ಷ್ಯಾಧಾರಗಳನ್ನು ಪರಿಗಣಿಸಿದ ನ್ಯಾಯಪೀಠ, ಇಲಾಖೆಯು ಕೈಗೊಂಡ ವಜಾ ಕ್ರಮದಲ್ಲಿ ಹಸ್ತಕ್ಷೇಪದ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿ ಅರ್ಜಿಯನ್ನು ತಿರಸ್ಕರಿಸಿದೆ.

