ಶಿವಮೊಗ್ಗ: ನಗರದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗುಂಡಿನ ಸದ್ದು ಮೊಳಗಿದೆ.
ರೌಡಿಶೀಟರ್ ಕಿರಣ್ ಅಲಿಯಾಸ್ ಕುಳ್ಳಿ ಕಿರಣ್ ಕೊಲೆ ಪ್ರಕರಣದ ಆರೋಪಿ ಉಮೇಶ್ ನಾಯ್ಕ್ (27) ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಭಾನುವಾರ (ಸೆ.6) ಸಂಜೆ ರಾಮಿನಕೊಪ್ಪದಲ್ಲಿ ಕಿರಣ್ ಅಲಿಯಾಸ್ ಕುಳ್ಳಿ ಕಿರಣ್ನನ್ನು 3–4 ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣದ ಆರೋಪಿಯನ್ನು ಬಂಧಿಸಲು ಪೊಲೀಸರು ಲಿಂಗಾಪುರಕ್ಕೆ ತೆರಳಿದ್ದರು.
ಈ ವೇಳೆ ಆರೋಪಿ ಪೊಲೀಸ್ ಸಿಬ್ಬಂದಿ ತಮ್ಮಣ್ಣ ಜಂಬಗಿ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ಮಾಡದಂತೆ ತುಂಗಾನಗರ ಠಾಣೆ ಇನ್ಸ್ಪೆಕ್ಟರ್ ಗುರುರಾಜ್ ಕರ್ಕಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಆರೋಪಿ ಮತ್ತೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಹಿನ್ನೆಲೆಯಲ್ಲಿ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ.
ಗುಂಡೇಟಿನಿಂದ ಗಾಯಗೊಂಡ ಉಮೇಶ್ ನಾಯ್ಕ್ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಪೊಲೀಸ್ ಸಿಬ್ಬಂದಿ ತಮ್ಮಣ್ಣ ಜಂಬಗಿ ಅವರಿಗೆ ಮೆಗ್ಗಾನ್ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



