ಬೆಂಗಳೂರು: ಪಿಒಪಿ ಗಣೇಶ ಮೂರ್ತಿಗಳ ವಿರುದ್ಧದ ಕ್ರಮದ ಬೆನ್ನಲ್ಲೇ ಇದೀಗ ಪಟಾಕಿ ಬಳಕೆ ಹಾಗೂ ಮಾರಾಟಕ್ಕೂ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ಮುಂದಾಗಿದೆ. ಹಬ್ಬದ ಸಂದರ್ಭದಲ್ಲಿ ಪರಿಸರಕ್ಕೆ ಹಾನಿ ಉಂಟುಮಾಡುವ ಪಟಾಕಿಗಳ ಬಳಕೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.
ಹಬ್ಬದ ಸಮಯದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದ್ದು, ಹಸಿರು ಪಟಾಕಿಗಳನ್ನು ಹೊರತುಪಡಿಸಿ ಮಾಲಿನ್ಯ ಉಂಟುಮಾಡುವ ಇತರೆ ಪಟಾಕಿಗಳನ್ನು ಮಾರಾಟ ಮಾಡಿದರೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.
ಪಟಾಕಿ ಮಾರಾಟ ಮಾಡುವ ಅಂಗಡಿ ಮಾಲೀಕರು, ತಾವು ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡುತ್ತೇವೆ ಎಂದು ಮುಚ್ಚಳಿಕೆ ಬರೆದುಕೊಡಬೇಕಾಗುತ್ತದೆ ಎಂದು ಪರಿಸರ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಮಾಲಿನ್ಯ ನಿಯಂತ್ರಣ ಹಾಗೂ ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಸರ್ಕಾರ ಈ ಕ್ರಮ ಕೈಗೊಳ್ಳುತ್ತಿದೆ. ಹೀಗಾಗಿ ಪಟಾಕಿ ವ್ಯಾಪಾರಿಗಳು ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಹಬ್ಬದ ಸಂದರ್ಭದಲ್ಲಿ ಪರಿಸರಕ್ಕೆ ಹಾನಿಕಾರಕ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸಲು ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಲಾಗಿದೆ.



