ದಾವಣಗೆರೆ: ಅಪಘಾತದಲ್ಲಿ ಗಾಯಗೊಂಡಿದ್ದ ಚಿರತೆಯನ್ನು ರಕ್ಷಿಸುವ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಅನಗೋಡು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ರಾತ್ರಿ 11 ಗಂಟೆ ಸುಮಾರಿಗೆ ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಗಾಯಗೊಂಡ ಚಿರತೆ ರಸ್ತೆ ಬದಿಯ ಚರಂಡಿಯಲ್ಲಿ ಬಿದ್ದು ನರಳಾಡುತ್ತಿತ್ತು. ಇದನ್ನು ಗಮನಿಸಿದ ಸಾರ್ವಜನಿಕರು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿ ಚಿಕಿತ್ಸೆಗಾಗಿ ಚಿರತೆಯನ್ನು ಸೆರೆ ಹಿಡಿಯಲು ಮುಂದಾದಾಗ ಅದು ಏಕಾಏಕಿ ದಾಳಿ ನಡೆಸಿದೆ. ದಾಳಿಯಲ್ಲಿ ಅರಣ್ಯ ಇಲಾಖೆಯ ಹೋಮ್ಗಾರ್ಡ್ ಒಬ್ಬರ ಕೈಗೆ ಗಾಯವಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಸಪೇಟೆಯಿಂದ ಆಗಮಿಸಿದ ವನ್ಯಜೀವಿ ಪಶುವೈದ್ಯರು ಗಾಯಗೊಂಡ ಚಿರತೆಗೆ ಅರವಳಿಕೆ ನೀಡಿದರು. ಚಿರತೆ ಪ್ರಜ್ಞೆ ತಪ್ಪಿದ ಬಳಿಕ ಅರಣ್ಯ ಸಿಬ್ಬಂದಿ ಬಲೆ ಹಾಕಿ ಸುರಕ್ಷಿತವಾಗಿ ಸೆರೆ ಹಿಡಿದಿದ್ದಾರೆ.
ಗಾಯಗೊಂಡಿರುವ ಚಿರತೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ತ್ಯಾವರೆಕೊಪ್ಪಕ್ಕೆ ಕರೆದೊಯ್ಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.



