ಬೆಂಗಳೂರು: ನಗರದಲ್ಲಿ ರಸ್ತೆ ಸುರಕ್ಷತೆ ಹೆಚ್ಚಿಸುವುದು ಹಾಗೂ ವಾಹನ ಸಂಚಾರವನ್ನು ಸುಗಮಗೊಳಿಸುವ ಉದ್ದೇಶದಿಂದ ಐದು ಪ್ರಮುಖ ಫ್ಲೈಓವರ್‌ಗಳು ಮತ್ತು ಎಲಿವೇಟೆಡ್ ಕಾರಿಡಾರ್‌ಗಳಲ್ಲಿ ವಿವಿಧ ವರ್ಗದ ವಾಹನಗಳ ಸಂಚಾರಕ್ಕೆ ವಿಧಿಸಲಾಗಿರುವ ನಿರ್ಬಂಧಗಳನ್ನು ಹಂತ ಹಂತವಾಗಿ ಜಾರಿಗೊಳಿಸಲು ಬೆಂಗಳೂರು ಸಂಚಾರ ಪೊಲೀಸರು ನಿರ್ಧರಿಸಿದ್ದಾರೆ ಎಂದು ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಐದು ಪ್ರಮುಖ ಎಲಿವೇಟೆಡ್ ಕಾರಿಡಾರ್‌ಗಳ ಪೈಕಿ ನಾಲ್ಕರಲ್ಲಿ ಈಗಾಗಲೇ ಸಂಚಾರ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದ್ದು, ಬಳಿಕ ಬೆಂಗಳೂರು ಸಂಚಾರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಬಿಜಿಎಸ್ ಫ್ಲೈಓವರ್, ಪೀಣ್ಯ ಫ್ಲೈಓವರ್ ಹಾಗೂ ಡಬಲ್ ಡೆಕ್ಕರ್ ಫ್ಲೈಓವರ್‌ಗಳಲ್ಲಿ ವಾಹನ ಸಂಚಾರ ಸುಗಮವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಯುತ್ತಿರುವುದು ಕಂಡುಬಂದಿದೆ ಎಂದು ಸಚಿವರು ತಿಳಿಸಿದ್ದಾರೆ.
ಆದರೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಎಲಿವೇಟೆಡ್ ಕಾರಿಡಾರ್‌ನಲ್ಲಿ, ಅಂದರೆ ಸಂಜೀವನಗರ ಕ್ರಾಸ್‌ನಿಂದ ವಿದ್ಯಾಶಿಲ್ಪ ಜಂಕ್ಷನ್‌ವರೆಗೆ, ಹಲವು ವರ್ಗದ ವಾಹನಗಳನ್ನು ಏಕಕಾಲದಲ್ಲಿ ಪ್ರವೇಶ ಮಾರ್ಗಗಳಲ್ಲೇ ಕೆಳಗಿನ ರಸ್ತೆಗೆ ತಿರುಗಿಸುವುದರಿಂದ ಸಂಚಾರ ಸಮಸ್ಯೆ ಉಂಟಾಗುತ್ತಿರುವುದು ಗಮನಕ್ಕೆ ಬಂದಿದೆ.
ಸರಕು ವಾಹನಗಳು, ದ್ವಿಚಕ್ರ ವಾಹನಗಳು ಹಾಗೂ ಆಟೋರಿಕ್ಷಾಗಳನ್ನು ಕೆಳಗಿನ ರಸ್ತೆಗೆ ತಿರುಗಿಸುವುದರಿಂದ ಸಂಚಾರ ಸಂಘರ್ಷ, ಸರತಿ ಸಾಲು ಹಾಗೂ ದಟ್ಟಣೆ ಉಂಟಾಗುತ್ತಿದೆ. ಇದರಿಂದ ಎಲಿವೇಟೆಡ್ ಕಾರಿಡಾರ್‌ಗೆ ಹೊಂದಿಕೊಂಡಿರುವ ಕೆಳಮಟ್ಟದ ರಸ್ತೆಯ ಸಂಚಾರದ ಮೇಲೂ ಹೆಚ್ಚುವರಿ ಪರಿಣಾಮ ಬೀರುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ರಸ್ತೆಯ ಎಲಿವೇಟೆಡ್ ಕಾರಿಡಾರ್‌ನಲ್ಲೂ ವಿವಿಧ ವರ್ಗದ ವಾಹನಗಳ ಸಂಚಾರ ನಿರ್ಬಂಧಗಳನ್ನು ಹಂತ ಹಂತವಾಗಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.



